alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಸರ್ಕಾರ ರಚನೆಗೆ ಈ ಲೆಕ್ಕಾಚಾರದಲ್ಲಿದೆಯಾ ಬಿಜೆಪಿ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದರೂ ಅಧಿಕಾರ ಪಡೆಯುವಲ್ಲಿ ವಿಫಲವಾಯಿತು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿ.ಎಸ್. ಯಡಿಯೂರಪ್ಪನವರು ಅನ್ಯ ಪಕ್ಷಗಳ ಶಾಸಕರ ಬೆಂಬಲ ಸಿಗದ ಕಾರಣ ವಿಶ್ವಾಸಮತ ಯಾಚನೆಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಳಿಕ ರಾಜ್ಯದಲ್ಲಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದ್ದರು.

ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದು ಹತ್ತು ದಿನಗಳು ಕಳೆಯುತ್ತಾ ಬಂದರೂ ಸಚಿವ ಸಂಪುಟ ರಚನೆಯಾಗಿಲ್ಲ. ಉಭಯ ಪಕ್ಷಗಳಲ್ಲಿ ಸಚಿವ ಸ್ಥಾನಾಕಾಂಕ್ಷಿಗಳು ದೊಡ್ಡ ಸಂಖ್ಯೆಯಲ್ಲಿರುವ ಕಾರಣ ಸಂಪುಟ ರಚನೆ ಕಗ್ಗಂಟಾಗಿ ಪರಿಣಮಿಸಿದೆ.

ಇದೀಗ ಸಚಿವ ಸಂಪುಟ ಪ್ರಮಾಣವಚನ ಬುಧವಾರಕ್ಕೆ ನಿಗದಿಯಾಗಿದ್ದು, ಇದರ ಬಳಿಕ ಸಚಿವ ಸ್ಥಾನ ವಂಚಿತರು ಸಿಡಿದೇಳುವ ಸಾಧ್ಯತೆ ಇದೆ. ಇದರ ಲಾಭ ಪಡೆಯುವ ನಿರೀಕ್ಷೆಯಲ್ಲಿರುವ ಬಿಜೆಪಿ ನಾಯಕರು, ಸಚಿವ ಸಂಪುಟ ರಚನೆಯಾಗುವುದನ್ನೇ ಕಾಯುತ್ತಿದ್ದಾರೆನ್ನಲಾಗಿದೆ.

ಕಾಂಗ್ರೆಸ್ ನ 10ಕ್ಕೂ ಅಧಿಕ ಶಾಸಕರು ಈಗಲೂ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆಂದು ಹೇಳಲಾಗಿದ್ದು, ಈ ಶಾಸಕರುಗಳು ಒಂದು ವೇಳೆ ತಮಗೆ ಸಚಿವ ಸ್ಥಾನ ತಪ್ಪಿದರೆ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಚಿಂತಿಸುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈಗಾಗಲೇ ಸದನದಲ್ಲಿ ತಮ್ಮ ಸರ್ಕಾರದ ಬಹುಮತ ಸಾಬೀತುಪಡಿಸಿರುವ ಹಿನ್ನೆಲೆಯಲ್ಲಿ ಇನ್ನಾರು ತಿಂಗಳು ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಹೀಗಾಗಿ ಸಚಿವ ಸ್ಥಾನ ವಂಚಿತ ಶಾಸಕರಿಂದ ರಾಜೀನಾಮೆ ಕೊಡಿಸಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಹೋರಾಟ ನಡೆಸುವುದು ಬಿಜೆಪಿ ನಾಯಕರ ಲೆಕ್ಕಾಚಾರವಾಗಿದೆ ಎನ್ನಲಾಗಿದೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲವೆಂಬುದು ಬಿಜೆಪಿ ನಾಯಕರ ಅಭಿಪ್ರಾಯವಾಗಿದ್ದು, ಇದರ ಲಾಭ ಪಡೆದು ಮತ್ತೊಮ್ಮೆ ಸರ್ಕಾರ ರಚಿಸುವುದು ಅಥವಾ ಚುನಾವಣೆಗೆ ಹೋಗುವ ಇರಾದೆ ಈ ನಾಯಕರದ್ದಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...