alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಂದು ಹಂತಕ್ಕೆ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ಭಾರೀ ಚರ್ಚೆಗಳು ನಡೆಯುತ್ತಿದ್ದು, ಆರೋಪ, ಪ್ರತ್ಯಾರೋಪಗಳು ಕೂಡ ಜೋರಾಗತೊಡಗಿವೆ.

ಸಿದ್ಧಗಂಗಾ ಸ್ವಾಮೀಜಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬೆಂಬಲ ನೀಡಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ ಬಳಿಕ ಚರ್ಚೆ ಇನ್ನೊಂದು ಹಂತ ತಲುಪಿದೆ. ಸ್ವಾಮೀಜಿ ಹಾಗೆ ಹೇಳಿಲ್ಲವೆಂದು ಸ್ಪಷ್ಟನೆ ನೀಡಿದ್ದು, ಎಲ್ಲರೂ ಒಂದಾಗಿ ಚರ್ಚಿಸಿ ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂದು ಸಲಹೆ ನೀಡಿದ್ದಾರೆ.

ಬಸವಧರ್ಮ ಪೀಠದ ಮಾತೆ ಮಹಾದೇವಿ ಅವರು, ಭಾರತ ರತ್ನ ಪ್ರಶಸ್ತಿ ಆಮಿಷದ ಕಾರಣದಿಂದ ಸ್ವಾಮೀಜಿ ತಮ್ಮ ಹೇಳಿಕೆಯನ್ನೇ ತಿರುಚಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ನೆನಪಿನ ಶಕ್ತಿ ಕಡಿಮೆಯಾಗಿದ್ದು, ಅದನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ. ಇದರ ನಡುವೆಯೇ ಕೆಲವು ರಾಜಕೀಯ ನಾಯಕರು ಲಿಂಗಾಯತ ಧರ್ಮ ಬೇಕು, ಬೇಡ ಎಂಬ ವಿಚಾರವಾಗಿ ಹೇಳಿಕೆಗಳನ್ನು ನೀಡಿದ್ದಾರೆ.

ಸಚಿವ ಶರಣಪ್ರಕಾಶ್ ಪಾಟೀಲ್ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಸಚಿವ ವಿನಯ್ ಕುಲಕರ್ಣಿ, ಬಸವರಾಜ ಹೊರಟ್ಟಿ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕೆ ಅಥವಾ ಲಿಂಗಾಯತ -ವೀರಶೈವ ಧರ್ಮ ಆಗಬೇಕೆ ಎಂಬುದರ ಕುರಿತಾಗಿ ವಿಸ್ತೃತ ಚರ್ಚೆ ನಡೆದಿದೆ. ಕೇವಲ ಚರ್ಚೆಯಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಇದಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಿ ಸಮಿತಿ ವರದಿ ನೀಡಿದ ಬಳಿಕ ಅಂತಿಮ ನಿರ್ಧಾರವನ್ನು ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಈ ಸಭೆಯಲ್ಲಿ ಉಭಯ ಬಣಗಳ ನಾಯಕರು ಚರ್ಚೆ ನಡೆಸಿರುವುದು ಮಹತ್ವದ ವಿಚಾರವಾಗಿದೆ. ವೀರಶೈವರು, ಲಿಂಗಾಯತರು ಬಹಿರಂಗ ಹೇಳಿಕೆ ನೀಡದೇ ಒಮ್ಮತದ ತೀರ್ಮಾನಗಳನ್ನು ಕೈಗೊಳ್ಳಲು ಸಭೆ ತೀರ್ಮಾನಿಸಿದೆ.

ಈ ನಡುವೆ ಎಂ.ಬಿ. ಪಾಟೀಲ್ ಹೇಳಿಕೆಗೆ ಮಹಾಸಭಾ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜಕೀಯ ಆರೋಪ, ಪ್ರತ್ಯಾರೋಪಗಳು ಕೇಳಿಬಂದಿವೆ. ಮುಂದೇನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...