alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ ಆಕ್ರೋಶ

ಮಹದಾಯಿ ಬಿಕ್ಕಟ್ಟು ಪರಿಹಾರ ಕಾಣದಿರುವುದಕ್ಕೆ ಕಾಂಗ್ರೆಸ್ ಕಾರಣ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಡಿಯುವ ನೀರಿನ ವಿಚಾರದಲ್ಲೂ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹದಾಯಿ ವಿಚಾರ ಸುಪ್ರಿಂ ಕೋರ್ಟ್ ಹಾಗೂ ನ್ಯಾಯಾಧೀಕರಣ ಮೆಟ್ಟಿಲೇರಲು ಕಾಂಗ್ರೆಸ್ ಕಾರಣ. ಆದರೆ ಇದೀಗ ಕೇಂದ್ರ ಸರ್ಕಾರದತ್ತ ಬೆಟ್ಟು ಮಾಡುತ್ತಿರುವ ಕಾಂಗ್ರೆಸ್ಸಿಗರು, ಪ್ರಧಾನಿ ನರೇಂದ್ರ ಮೋದಿಯನ್ನು ದೂರುವುದರಲ್ಲಿ ಅರ್ಥವಿಲ್ಲ ಎಂದರು.

ಸಮಸ್ಯೆ ಇತ್ಯರ್ಥಪಡಿಸಲು ಬಿಜೆಪಿ ಪ್ರಾಮಾಣಿಕವಾಗಿ ಪ್ರಯತ್ನಪಟ್ಟಿದೆ. ಗೋವಾ ರಾಜ್ಯದ ಮುಖ್ಯಮಂತ್ರಿಗಳನ್ನು ಒಪ್ಪಿಸಲು ಸಿದ್ದರಿದ್ದೇವೆ. ಆದರೆ ಅಲ್ಲಿನ ಕಾಂಗ್ರೆಸ್ ನಾಯಕರನ್ನು ಒಪ್ಪಿಸುವಲ್ಲಿ ಕಾಂಗ್ರೆಸ್ ಹಿಂದೇಟು ಹಾಕುತ್ತಾ ಕೆಟ್ಟ ರಾಜಕಾರಣ  ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಹದಾಯಿ ವಿಚಾರದಲ್ಲಿ ಕೆಲವು ವ್ಯಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಲಿಂಗಾಯಿತ-ವೀರಶೈವ, ಮಹದಾಯಿ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ. ಚುನಾವಣೆಯಲ್ಲಿ ಇವರಿಗೆ ಮತದಾರರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಡಿ.31 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬೆಂಗಳೂರಿಗೆ ಭೇಟಿ ನೀಡುವರು. ಅಂದು ಬೆಳಿಗ್ಗೆ 11.30 ರಿಂದ 12.30 ರವರೆಗೆ ಎಂಎಲ್ಎ, ಎಂಎಲ್ಸಿ ಹಾಗೂ ಸಂಸದರೊಂದಿಗೆ ವಿಶೇಷ ಸಭೆ ನಡೆಸುವರು. ನಂತರ ವಿಧಾನಸಭಾ ಕ್ಷೇತ್ರಗಳ ಪ್ರಭಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ರಾಜ್ಯದ ಬಿಜೆಪಿ ಪದಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯಲಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು.

ಅಭ್ಯರ್ಥಿ ಆಯ್ಕೆ ಕುರಿತಂತೆ ಸರ್ವೇ ಕಾರ್ಯ ನಡೆಸಲಾಗುತ್ತಿದೆ. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ಪೂರ್ಣಗೊಂಡ ಬಳಿಕ ವರದಿ ವರಿಷ್ಟರ ಕೈಸೇರಲಿದೆ. ಬಳಿಕವಷ್ಟೆ ಅಭ್ಯರ್ಥಿಗಳನ್ನು ಪಕ್ಷದ ರಾಷ್ಟ್ರೀಯ ನಾಯಕರು ಅಂತಿಮಗೊಳಿಸಲಿದ್ದಾರೆ ಎಂದರು.

ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಈಗ ಘೋಷಿಸಿರುವುದು ಅಂತಿಮವಲ್ಲ. ರಾಷ್ಟ್ರೀಯ ನಾಯಕರ ತೀರ್ಮಾನವೇ ಅಂತಿಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ 3 ರಿಂದ 4 ಜನ ಅಭ್ಯರ್ಥಿ ಆಕಾಂಕ್ಷಿಗಳಿದ್ದಾರೆ. ಇದನ್ನು ಗೊಂದಲ ಎನ್ನುವುದಕ್ಕೆ ಸಾಧ್ಯವಿಲ್ಲ. ಪಕ್ಷ ಪ್ರಬಲವಾಗಿರುವುದನ್ನು ಸೂಚಿಸುತ್ತದೆ ಎಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...