alex Certify
ಕನ್ನಡ ದುನಿಯಾ       Mobile App
       

Kannada Duniya

3 ದಶಕಗಳ ಬಳಿಕ ಮಲೆನಾಡ ಹೆಬ್ಬಾಗಿಲಿಗೆ ಪ್ರಧಾನಿ

ಶಿವಮೊಗ್ಗ: ಮೂರು ದಶಕಗಳ ನಂತರ ದೇಶದ ಪ್ರಧಾನಿಯೊಬ್ಬರು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ.

ಪ್ರಧಾನಿ ನರೇಂದ್ರ ಮೋದಿ ವಿಧಾನಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಇದೇ ಮೇ 5 ರಂದು ಶನಿವಾರ ಆಗಮಿಸುತ್ತಿದ್ದು, ಬಿಜೆಪಿ ಪಾಳಯದಲ್ಲಿ ಉತ್ಸಾಹ ಗರಿಗೆದರಿದೆ.

ಈ ಹಿಂದೆ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಶಿವಮೊಗ್ಗಕ್ಕೆ ಒಮ್ಮೆ ಭೇಟಿ ನೀಡಿದ್ದರು. ಆದರೆ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವುದು, ಅವರ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಎನ್ಇಎಸ್ ಮೈದಾನದಲ್ಲಿ ಸಮಾವೇಶಕ್ಕಾಗಿ ಪೂರ್ವಭಾವಿ ಸಿದ್ಧತೆಗಳು ಭರದಿಂದ ಸಾಗಿದ್ದು, ಪ್ರಧಾನಿ ಮೋದಿಯವರು ಭಾಷಣ ಮಾಡಲಿರುವ ವೇದಿಕೆ ನಿರ್ಮಾಣ ಕಾರ್ಯಕ್ಕೆ ಗುರುವಾರ ಕೆ.ಎಸ್. ಈಶ್ವರಪ್ಪ ಭೂಮಿ ಪೂಜೆ ನೆರವೇರಿಸಿದರು.

ಸಮಾವೇಶದಲ್ಲಿ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಹಿನ್ನೆಲೆಯಲ್ಲಿ ವೇದಿಕೆ ಮುಂಭಾಗ ಬೃಹತ್ ಪೆಂಡಾಲನ್ನು ಹಾಕಲಾಗುತ್ತಿದೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮೋದಿ ಆಗಮನದ ಹಿನ್ನೆಲೆಯಲ್ಲಿ ಪ್ರತಿ ಪ್ರತಿ ಮನೆ ಮನೆಗೆ ತೆರಳಿ ಸಾರ್ವಜನಿಕರನ್ನು ಆಹ್ವಾನಿಸಿದ್ದಾರೆ.

ಅಲ್ಲದೇ ದೂರವಾಣಿ ಮೂಲಕವು ಸಾವಿರಾರು ಜನರಿಗೆ ಆಹ್ವಾನ ನೀಡಲಾಗಿದೆ. ಜಿಲ್ಲೆಯ ವಿವಿಧ ಕ್ಷೇತ್ರಗಳ ಗಣ್ಯರಿಗೂ ಸಮಾವೇಶಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ.

ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಶಿಕಾರಿಪುರ ಕ್ಷೇತ್ರದ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು, ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಸುರಕ್ಷತೆಯ ಉಸ್ತುವಾರಿ ಹೊತ್ತಿರುವ ಎಸ್ಪಿಜಿ ಕಮಾಂಡೋಗಳು ಈಗಾಗಲೇ ಪ್ರಧಾನಿ ಸಾಗುವ ಮಾರ್ಗ ಹಾಗೂ ಸಮಾವೇಶ ನಡೆಯುವ ಸ್ಥಳದಲ್ಲಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...