alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್.ಡಿ.ಕೆ. ಜೊತೆ ನಾಳೆ ಪ್ರಮಾಣವಚನ ಸ್ವೀಕರಿಸುವವರ್ಯಾರು?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿದ್ದು, ವಿಧಾನಸೌಧದ ಪೂರ್ವಭಾಗದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಈ ಮೊದಲು ಕುಮಾರಸ್ವಾಮಿಯವರೊಬ್ಬರೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತಾದರೂ ಬದಲಾದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಿಂದ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಕೆಲ ಶಾಸಕರು, ಜೆಡಿಎಸ್ ನ ಕುಮಾರಸ್ವಾಮಿ ಅವರೊಬ್ಬರೇ ನಾಳೆ ಪ್ರಮಾಣ ವಚನ ಸ್ವೀಕರಿಸಿದರೆ ಅದು ಸಂಪೂರ್ಣ ಜೆಡಿಎಸ್ ಸಮಾರಂಭವಾಗುತ್ತದೆ. ಹೀಗಾಗಿ ಕಾಂಗ್ರೆಸ್ ನವರು ಪ್ರಮಾಣವಚನ ಸ್ವೀಕರಿಸುವುದು ಸೂಕ್ತ ಎಂದು ಸಲಹೆ ನೀಡಿದರು ಎನ್ನಲಾಗಿದೆ.

ಶಾಸಕರ ಭಾವನೆಗಳಿಗೆ ಸ್ಪಂದಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕರೆ ಮಾಡಿ ಈ ವಿಚಾರವನ್ನು ಮನವರಿಕೆ ಮಾಡಿಕೊಟ್ಟರೆಂದು ಹೇಳಲಾಗಿದೆ.

ಇದಕ್ಕೆ ರಾಹುಲ್ ಗಾಂಧಿಯವರು ಸಮ್ಮತಿಸಿದ್ದು, ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಮುಖ್ಯಮಂತ್ರಿಯಾಗಲಿರುವ ಕುಮಾರಸ್ವಾಮಿಯವರೊಂದಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಬಹುಮತ ಸಾಬೀತುಪಡಿಸಿದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ಮತ್ತೊಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ನಿರೀಕ್ಷೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...