alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರ ಉರುಳುತ್ತಾ-ಉಳಿಯುತ್ತಾ…? ಹಾಲಿ-ಮಾಜಿಗಳ ಗುದ್ದಾಟದಲ್ಲಿ ಗೆಲ್ಲುವವರಾರು…?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ವಿದ್ಯಮಾನಗಳು ನಡೆಯುತ್ತಿದ್ದು, ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಮುಂದಾಗಿರುವ ಬಿಜೆಪಿ ಜೊತೆಗೆ ಕಾಂಗ್ರೆಸ್ ನಲ್ಲಿನ ಕೆಲ ಅತೃಪ್ತ ನಾಯಕರು ಮುಂದಾಗಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಗಳು ಹಾಗೂ ಸಿದ್ದರಾಮಯ್ಯನವರ ಹೇಳಿಕೆಗಳಿಗೆ ಬೆಂಬಲ ಸೂಚಿಸುತ್ತಿರುವ ಕಾಂಗ್ರೆಸ್ ನ ಕೆಲ ನಾಯಕರ ನಡವಳಿಕೆಗಳು ಪುಷ್ಟಿ ನೀಡುವಂತಿದೆ.

ನಾನು ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಬಹಿರಂಗ ಹೇಳಿಕೆ ನೀಡಿದ್ದ ಬೆನ್ನಲ್ಲೇ, ಕೆಲ ಕಾಂಗ್ರೆಸ್ ನಾಯಕರೂ ಅವರ ಬೆಂಬಲಕ್ಕೆ ನಿಂತಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಲು ಕಾರಣವಾಗಿದೆ. ಇದರಿಂದಾಗಿ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಆಡಳಿತಕ್ಕೆ ತೀವ್ರ ಮುಜುಗರವುಂಟಾಗುತ್ತಿದೆ. ಉಭಯ ಪಕ್ಷದ ನಾಯಕರ ನಡುವೆ ಅಸಮಾಧಾನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಇತ್ತೀಚೆಗೆ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಚೆಲುವರಾಯಸ್ವಾಮಿ ಮಾತುಕತೆ ನಡೆಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಒಂಟಿಯಲ್ಲ. ಕಾಂಗ್ರೆಸ್​ನ ಶಾಸಕರು, ಮಾಜಿ ಶಾಸಕರು, ಸಚಿವರು, ಸಂಸದರು ಅವರ ಜತೆಗಿದ್ದಾರೆ ಎಂದು ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದು, ಇದಕ್ಕೆ ಇನ್ನಷ್ಟು ನಾಯಕರು ದನಿಗೂಡಿಸಿರುವುದು ಸಮ್ಮಿಶ್ರ ಸರ್ಕಾರಕ್ಕೆ ಕಂಟಕವಾಗುವುದೇ ಎಂಬ ಆತಂಕ ಎದುರಾಗಿದೆ.

ಸಿದ್ದರಾಮಯ್ಯನವರಿಗೆ ಬೆಂಬಲ ನೀಡಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕೆಲ ಕೈ ನಾಯಕರು ಈ ತಂತ್ರ ಅನುಸರಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದನ್ನೇ ಗಾಳವಾಗಿಸಲು ಮುಂದಾಗಿರುವ ಮಾಜಿ ಸಿಎಂ, ತಮ್ಮ ಬೆಂಬಲಿಗರು ಚದುರದಂತೆ ನೋಡಿಕೊಳ್ಳುವ ಯತ್ನ ನಡೆಸಿ, ಪಕ್ಷದ ಮೇಲೆ ಹಿಡಿತ ಸಾಧಿಸಲು ತಂತ್ರಗಾರಿಕೆ ರೂಪಿಸಿದ್ದಾರೆ. ಒಂದೆಡೆ ಬಿಜೆಪಿಯವರು ಆಪರೇಷನ್‌ ಕಮಲ ಕಾರ್ಯಾಚರಣೆ ನಡೆಸಲು ಮುಂದಾಗಿದ್ದರೆ ಇನ್ನೊಂದೆಡೆ ಕಾಂಗ್ರೆಸ್‌ನವರೇ ಸರ್ಕಾರ ಕೆಡವಲು ಕಾರ್ಯತಂತ್ರ ರೂಪಿಸಿದ್ದಾರೆ. ಸಂಪುಟದಲ್ಲಿ ಸ್ಥಾನ ಸಿಗದ ಅತೃಪ್ತರು ಇದಕ್ಕೆ ಸೊಪ್ಪು ಹಾಕುತ್ತಿದ್ದಾರೆ ಎನ್ನಲಾಗ್ತಿದೆ.

ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮುಖಾಮುಖಿಯಾಗುತ್ತಿಲ್ಲ. ಒಂದೇ ವೇದಿಕೆಯಲ್ಲಿ ಕೂರುವ ಅನಿವಾರ್ಯತೆ ಎದುರಾದರೂ ತಪ್ಪಿಸಿಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿ ಮೈಸೂರಿಗೆ ತೆರಳಿದರೆ, ಸಿದ್ದರಾಮಯ್ಯ ಬಾದಾಮಿಯತ್ತ ಹೊರಡುತ್ತಾರೆ. ಹೀಗೆ ಒಬ್ಬರಿಗೊಬ್ಬರು ಪಲಾಯನವಾದ ಅನುಸರಿಸುತ್ತಿದ್ದಾರೆ. ಈ ನಡುವೆ ಸೆ.2 ಕ್ಕೆ ಸಮ್ಮಿಶ್ರ ಸರ್ಕಾರ ಬಿದ್ದು ಹೋಗಲಿದೆ. ನೂತನ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಭವಿಷ್ಯವನ್ನು ಕೆಲ ನಾಯಕರು ನುಡಿಯುತ್ತಿದ್ದಾರೆ.

ಆದರೆ ಮಂತ್ರಿ ಸ್ಥಾನದಲ್ಲಿರುವ ಕೆಲ ನಾಯಕರು ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂಬ ಹೇಳಿಕೆ ನೀಡುತ್ತಿದ್ದಾರೆ. ಹಿರಿಯ ಸಚಿವರಾದ ಆರ್‌.ವಿ. ದೇಶಪಾಂಡೆ, ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯನವರು ಈಗಲೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಲ್ಲ. ಈ ಸರ್ಕಾರ ಬೀಳಿಸಿ ಅವರು ಮುಖ್ಯಮಂತ್ರಿಯಾಗುವುದಿಲ್ಲ. ಐದು ವರ್ಷ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಎಂದು ರಾಹುಲ್‌ಗಾಂಧಿ ಭರವಸೆ ನೀಡಿದ್ದಾರೆ ಎಂಬ ಹೇಳಿಕೆ ನೀಡಿದರೆ, ಅತ್ತ ಮಾಜಿ ಸಚಿವ ಹೆಚ್‌.ಎಂ.ರೇವಣ್ಣ , ಸಮ್ಮಿಶ್ರ ಸರ್ಕಾರಕ್ಕೆ ಆತಂಕ ಇಲ್ಲ. ಆದರೆ, ಸಿದ್ದರಾಮಯ್ಯ ಮಾಸ್‌ ಲೀಡರ್‌. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದರೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಿದ್ದರು ಎಂದಿದ್ದಾರೆ.

ಇನ್ನು ಸಚಿವ ಜಮೀರ್‌ ಅಹಮದ್‌, ಕಾಂಗ್ರೆಸ್‌-ಜೆಡಿಎಸ್‌ ನಡುವೆ ರಿಜಿಸ್ಟರ್‌ ಮ್ಯಾರೇಜ್‌ ಆಗಿದೆ. ಸರ್ಕಾರಕ್ಕೆ ತೊಂದರೆಯಿಲ್ಲ ಎನ್ನುತ್ತಿದ್ದಾರೆ. ಇತ್ತ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್‌, ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ಅಷ್ಟೇ ಸತ್ಯ ಎಂದು ಖಡಾಖಂಡಿತವಾಗಿ ಹೇಳುತ್ತಿದ್ದಾರೆ.

ಒಟ್ಟಿನಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉರುಳಲಿದೆಯೇ…? ಅಥವಾ ಮುಖ್ಯಮಂತ್ರಿ ಸ್ಥಾನ ಮಾತ್ರ ಬದಲಾಗಲಿದೆಯೇ…? ಎಂಬುದನ್ನು ಕಾದು ನೋಡಬೇಕಾಗಿದೆ. ಆದರೆ ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತೆ ನಾಯಕರ ಅಧಿಕಾರದ ಆಸೆಗೆ ರಾಜ್ಯದ ಜನತೆಯ ಸಂಕಷ್ಟ ಆಲಿಸುವವರು ಯಾರೂ ಇಲ್ಲ ಎಂಬಂತಾಗಿದೆ. ಒಟ್ಟಾರೆ ನಾಯಕರಿಗೆ ಅಧಿಕಾರ ಬೇಕೇ ಹೊರತು ಅಭಿವೃದ್ಧಿ ಬೇಕಿಲ್ಲ ಎಂಬುದಂತು ಸತ್ಯ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...