alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕಾರಿಪುರದಿಂದಲೇ ಸ್ಪರ್ಧಿಸುವ ಬಯಕೆ: ಯಡಿಯೂರಪ್ಪ

ತಮಗೆ ರಾಜಕೀಯ ಶಕ್ತಿ ನೀಡಿರುವ ಶಿಕಾರಿಪುರ ಕ್ಷೇತ್ರದಿಂದಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಅಪೇಕ್ಷೆ ಇದೆ. ಆದರೆ ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ಬದ್ದನಾಗಿರುವುದಾಗಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಪಾಲು ಶಿಕಾರಿಪುರದಿಂದಲೇ ಸ್ಪರ್ಧಿಸಬೇಕು ಎಂಬ ಬಯಕೆ ಹೊಂದಿದ್ದೇನೆ. ವರಿಷ್ಠರು ಯಾವ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸೂಚಿಸುತ್ತಾರೋ ಅದನ್ನು ಪಾಲಿಸುತ್ತೇನೆ ಎಂದರು.

ಬಾಗಲಕೋಟೆ ಜಿಲ್ಲೆಯ ತೇರದಾಳು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಅದನ್ನು ಯಾರೂ ನಂಬಬಾರದು. ಗುಲ್ಬರ್ಗ, ಬೆಳಗಾಂ, ಬೀದರ್ ಹೀಗೆ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಒತ್ತಾಯ ಕೇಳಿ ಬರುತ್ತಿದೆ ಎಂದು ತಿಳಿಸಿದರು.

ಬಿಜೆಪಿಯ ಹಲವರ ಕ್ಷೇತ್ರ ಬದಲಾವಣೆ ಆಗುತ್ತದೆ ಎಂಬ ಮಾತಿನಲ್ಲಿ ಸತ್ಯವಿಲ್ಲ.  ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಬೇಕಾಗುತ್ತದೆ. ಇದುವರೆಗೂ ಯಾರಿಗೂ ಯಾವುದೇ ಕ್ಷೇತ್ರ ನಿಗದಿಯಾಗಿಲ್ಲ ಎಂದರು.

ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಬೇಕೆಂಬ ಗುರಿ ಇದೆ. ಈಗಾಗಲೇ ಕಾರ್ಯತಂತ್ರ ನಡೆಸಲಾಗಿದೆ. ಚುನಾವಣೆ ಸಮೀಪದಲ್ಲಿದ್ದು, ಕಾರ್ಯಕರ್ತರು ಪ್ರತಿ ಬೂತ್ ಮಟ್ಟದಲ್ಲೂ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಶ್ರಮವಹಿಸಿದ್ದಾರೆ. ನವೆಂಬರ್ 2ರಂದು ಕರ್ನಾಟಕ ಪರಿವರ್ತನಾ ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ ಅಂದು ಬೃಹತ್ ರ್ಯಾಲಿ ನಡೆಯಲಿದೆ ಎಂದರು.

ಬಿಜೆಪಿ ಬೂತ್ ಮಟ್ಟದಲ್ಲೂ ಸದೃಢವಾಗಿದೆ. ಕಾಂಗ್ರೆಸ್ ಪಕ್ಷವನ್ನು ನೋಡಿ ಕಲಿಯಬೇಕಾದ ಅಗತ್ಯವಿಲ್ಲ. ಕಾರ್ಯಕರ್ತರು ಕ್ರಿಯಾಶೀಲವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ಧಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವೀರಶೈವ ಮತ್ತು ಲಿಂಗಾಯತ ಧರ್ಮ ಒಂದೇ ಧರ್ಮವಾಗಿದೆ. ಇದನ್ನು ಪ್ರತ್ಯೇಕಿಸಲು ಯಾರಿಂದಲೂ ಸಾಧ್ಯವಿಲ್ಲ. ಈಗಾಗಲೇ ಅಖಿಲ ಭಾರತ ವೀರಶೈವ ಮಹಾಸಭಾದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡುತ್ತಿರುವ ಹಗುರ ಹೇಳಿಕೆ ಕುರಿತು ಪದೇ ಪದೇ ಉತ್ತರ ಕೊಡುವುದಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಆತ್ಮೀಯ ಸ್ನೇಹಿತರು, ಭಿನ್ನಮತ ಏನಿದ್ದರೂ ಮಾಧ್ಯಮಗಳ ಸೃಷ್ಟಿ. ಪಕ್ಷದ ವರಿಷ್ಠರ ಅಣತಿ ಮೇರೆಗೆ ಮುಂದಿನ ದಿನಗಳಲ್ಲಿ ಪಕ್ಷವನ್ನು ಒಟ್ಟಾಗಿ ಸಂಘಟಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...