ಅಪ್ಪ ಜೆಡಿಎಸ್ ನಿಂದ – ಮಗ ಕಾಂಗ್ರೆಸ್ ನಿಂದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು….!

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 13 ರ ಶನಿವಾರದಂದು ಪ್ರಕಟವಾಗಿದ್ದು, 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 134 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಆಡಳಿತರೂಢ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು 66 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದರೆ, ಜೆಡಿಎಸ್ ಗೆ 19 ಸ್ಥಾನಗಳು ಹಾಗೂ ಇತರರು 4 ಸ್ಥಾನಗಳಲ್ಲಿ ಜಯ ಸಾಧಿಸಿದ್ದಾರೆ.

ಈ ಚುನಾವಣೆಯಲ್ಲಿ ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎ. ಮಂಜು ಜಯ ಸಾಧಿಸಿದ್ದರೆ, ಅವರ ಪುತ್ರ ಮಂತರ್ ಗೌಡ ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವಿನ ನಗೆ ಬೀರಿದ್ದಾರೆ.

ಇನ್ನು ಚನ್ನಪಟ್ಟಣದ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಗೆಲುವು ಸಾಧಿಸಿದ್ದು, ರಾಮನಗರದಲ್ಲಿ ಅಭ್ಯರ್ಥಿಯಾಗಿದ್ದ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಹಾಗೂ ಉತ್ತರ ಕ್ಷೇತ್ರದಿಂದ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದು, ಇಬ್ಬರೂ ಸಹ ಜಯ ಸಾಧಿಸಿದ್ದಾರೆ.

ಇನ್ನು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ. ದೇವೇಗೌಡ ಹಾಗೂ ಹುಣಸೂರು ಕ್ಷೇತ್ರದಿಂದ ಅವರ ಪುತ್ರ ಹರೀಶ್ ಗೌಡ ಜೆಡಿಎಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದು, ಇಬ್ಬರೂ ಸಹ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಬಿಟಿಎಂ ಲೇಔಟ್ ಕ್ಷೇತ್ರದಿಂದ ರಾಮಲಿಂಗಾರೆಡ್ಡಿ ಹಾಗೂ ಜಯನಗರ ಕ್ಷೇತ್ರದಿಂದ ಅವರ ಪುತ್ರಿ ಸೌಮ್ಯ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದು, ಈ ಪೈಕಿ ರಾಮಲಿಂಗಾ ರೆಡ್ಡಿ ಗೆಲುವು ಸಾಧಿಸಿದ್ದಾರೆ, ಅವರ ಪುತ್ರಿ ಸೌಮ್ಯ ರೆಡ್ಡಿ ಕೇವಲ 16 ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ.

ಇನ್ನು ದೇವನಹಳ್ಳಿ ಕ್ಷೇತ್ರದಿಂದ ಕೆ.ಎಚ್. ಮುನಿಯಪ್ಪ ಹಾಗೂ ಅವರ ಪುತ್ರಿ ರೂಪಕಲಾ ಶಶಿಧರ್ ಕೆಜಿಎಫ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಇಬ್ಬರೂ ಸಹ ಜಯ ಸಾಧಿಸಿದ್ದಾರೆ.

ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರದಿಂದ ಎಂ. ಕೃಷ್ಣಪ್ಪ ಹಾಗೂ ಗೋವಿಂದರಾಜ ನಗರ ಕ್ಷೇತ್ರದಿಂದ ಅವರ ಪುತ್ರ ಪ್ರಿಯಾಕೃಷ್ಣ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದು, ಇಬ್ಬರೂ ಸಹ ಗೆಲುವಿನ ನಗೆ ಬೀರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read