
ಇದೀಗ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ, ಯಡಿಯೂರಪ್ಪನವರು ಇಂದು ಮೌನವಾಗಿದ್ದಾರೆ ಎಂಬ ಕಾರಣಕ್ಕೆ ಅದನ್ನು ದೌರ್ಬಲ್ಯವೆಂದು ಭಾವಿಸಬೇಡಿ. ಇದರಿಂದ ಮುಂದಿನ ದಿನಗಳಲ್ಲಿ ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡುವ ಮೂಲಕ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.
ಹಾವೇರಿ ಜಿಲ್ಲೆ, ರಾಣೇಬೆನ್ನೂರು ನಗರದಲ್ಲಿ ಬುಧವಾರದಂದು ಆಯೋಜಿಸಲಾಗಿದ್ದ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಇಂದು ಮುಖ್ಯಮಂತ್ರಿ ಸ್ಥಾನದಲ್ಲಿ ಇಲ್ಲದಿದ್ದರೂ ಸಹ ಆರೂವರೆ ಕೋಟಿ ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ತಮ್ಮ 81 ನೇ ವಯಸ್ಸಿನಲ್ಲೂ ಸಹ ರಾಜ್ಯದಾದ್ಯಂತ ಪ್ರವಾಸ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಎದೆಗಾರಿಕೆ ಯಾರಿಗಾದರೂ ಇದೆಯೇ ಎಂದು ಪ್ರಶ್ನಿಸಿದರು.

