ಮುಂಬರುವ ವಿಧಾನಸಭಾ ಚುನಾವಣೆಗಾಗಿ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಪಂಚರತ್ನ ರಥಯಾತ್ರೆ ನಡೆಸುತ್ತಿದೆ. ಇದರ ಜೊತೆಗೆ ಈಗಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಪ್ರಕಟಿಸಿದ್ದು, ಈಗಿನಿಂದಲೇ ಪ್ರಚಾರ ಕಾರ್ಯ ಆರಂಭಿಸುವಂತೆ ಸೂಚಿಸಿದೆ.
ಇದರ ಮಧ್ಯೆ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗದಿದ್ದರೂ ಸಹ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ, ನಾನೇ ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗುತ್ತೇನೆ. ಇನ್ನು ಕೆಲವೇ ದಿನಗಳಲ್ಲಿ ಹೆಸರು ಘೋಷಣೆಯಾಗಲಿದೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಹಾಸನ ತಾಲೂಕಿನ ಕಕ್ಕೇನಹಳ್ಳಿಯಲ್ಲಿ ಅಣ್ಣಪ್ಪ ಸ್ವಾಮಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅವರು, ನಾನು ಈಗಾಗಲೇ ಕ್ಷೇತ್ರ ಪ್ರವಾಸ ಮಾಡುತ್ತಿದ್ದೇನೆ. ಇನ್ನು 90 ದಿನಗಳಲ್ಲಿ ಚುನಾವಣೆ ಮುಗಿದು ಹೋಗಲಿದ್ದು, ನನಗೆ ಆಶೀರ್ವಾದ ಮಾಡಿ ಎಂದು ಕೋರಿದ್ದಾರೆ.
ಇದರ ಮಧ್ಯೆ ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ಎಚ್.ಪಿ. ಸ್ವರೂಪ್, ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ. ನನ್ನ ತಂದೆ ಹೆಚ್.ಎಸ್. ಪ್ರಕಾಶ್ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ವರಿಷ್ಠರು ಈ ಬಾರಿ ನನಗೇ ಟಿಕೆಟ್ ಕೊಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಒಂದೊಮ್ಮೆ ಭವಾನಿ ರೇವಣ್ಣ ಅವರಿಗೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಿದರೆ ದೇವೇಗೌಡರ ಕುಟುಂಬದ ಮತ್ತೊಬ್ಬರು ಚುನಾವಣಾ ರಾಜಕೀಯ ಪ್ರವೇಶ ಮಾಡಿದಂತಾಗುತ್ತದೆ. ದೇವೇಗೌಡರು ರಾಜ್ಯಸಭಾ ಸದಸ್ಯರಾಗಿದ್ದರೆ, ಹೆಚ್.ಡಿ. ರೇವಣ್ಣ ಶಾಸಕರಾಗಿದ್ದಾರೆ. ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರೇವಣ್ಣ ವಿಧಾನ ಪರಿಷತ್ ಸದಸ್ಯರಾಗಿದ್ದು, ಕಿರಿಯ ಪುತ್ರ ಪ್ರಜ್ವಲ್ ರೇವಣ್ಣ ಸಂಸದರಾಗಿದ್ದಾರೆ. ಇನ್ನು ರೇವಣ್ಣ ಅವರ ಸಹೋದರ ಎಚ್.ಡಿ. ಕುಮಾರಸ್ವಾಮಿ ಮತ್ತು ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ ಶಾಸಕರುಗಳಾಗಿದ್ದಾರೆ. ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದರಾದರೂ ಸಹ ಸುಮಲತಾ ಅಂಬರೀಶ್ ಎದುರು ಪರಾಭವಗೊಂಡಿದ್ದರು.
