ಶಿವಮೊಗ್ಗ: ರಾಜ್ಯಾದ್ಯಂತ 1250 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು 2026ರ ಡಿಸೆಂಬರ್ ಮಾಸಾಂತ್ಯದೊಳಗಾಗಿ ಉದ್ಘಾಟಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಈ ಯೋಜನೆಗಾಗಿ ಸುಮಾರು 4300 ಕೋಟಿಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದು ರಾಜ್ಯ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ಸಾಗರದ ಗಾಂಧಿ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸಾಗರ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಒಂದೇ ಶಾಲೆಯ ಆವರಣದಲ್ಲಿ ಒಂದರಿಂದ ಪದವಿಪೂರ್ವ ಶಿಕ್ಷಣದವರೆಗೆ ಎಲ್ಲರಿಗೂ ಉಚಿತವಾಗಿ ಶಿಕ್ಷಣ ದೊರೆಲಿದೆ. ಅಲ್ಲದೇ ಮೂಲಭೂತ ಸೌಲಭ್ಯಗಳ ಜೊತೆಗೆ ಅಗತ್ಯವಾಗಿರುವ ಎಲ್ಲಾ ರೀತಿಯ ಶಿಕ್ಷಕರನ್ನು ಕೂಡ ನೇಮಕಗೊಳಿಸಲಾಗುತ್ತಿದೆ. ಶಾಲೆಗೆ ಬರುವ ಮಕ್ಕಳ ಅನುಕೂಲಕ್ಕಾಗಿ ಉಚಿತ ಬಸ್ ಸಂಪರ್ಕ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ನುಡಿದರು.
ಜನರ ಅಶೋತ್ತರಗಳಿಗೆ ಪೂರಕವಾಗಿ ಸರ್ಕಾರವು ರೂಪಿಸಿ, ಅನುಷ್ಠಾನಗೊಳಿಸುವ ಜನಪರ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಬೇಕೆನ್ನುವುದು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ನೀಡುವುದು ಸರ್ಕಾರದ ಆಶಯವಾಗಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವುದಲ್ಲದೆ ಗ್ರಾಮೀಣ ಜನರ ಜ್ವಲಂತ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಒದಗಿಸುವುದು ಕೂಡ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇದರಿಂದಾಗಿ ಸ್ಥಳೀಯ ಜನರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ದೊರೆತು ನೆಮ್ಮದಿಯ ಬದುಕು ಸಾಧ್ಯವಾಗಲಿದೆ ಎಂದು ಹೇಳಿದರು.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಜಾ ಸೇವಾ ಆಂದೋಲನ ಸಭೆಗಳು ನಡೆಯಲಿವೆ. ನಿಕಟ ಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಇದೇ ರೀತಿಯ ಜನಸ್ಪಂದನ ಎಂಬ ಅಪರೂಪದ ಜನಪ್ರಿಯ ಕಾರ್ಯಕ್ರಮವನ್ನು ರೂಪಿಸಿ ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯ ಜನರಿಗೆ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲಾಗಿತ್ತು. ಪ್ರಸ್ತುತ ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ರಾಜ್ಯಮಟ್ಟದಲ್ಲಿ ಪ್ರಜಾಸೇವಾ ಎಂಬ ಇಲಾಖೆಯನ್ನು ಪ್ರತ್ಯೇಕವಾಗಿ ಸೃಷ್ಟಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸ್ವೀಕರಿಸಲಾಗುವ ಎಲ್ಲಾ ಅರ್ಜಿಗಳನ್ನು ನಿಗದಿಪಡಿಸಿದ ಕಾಲಮಿತಿಯಲ್ಲಿ ವಿಲೇವಾರಿ ಗೊಳಿಸಲಾಗುವುದು ಎಂದರು.
ಯಾವುದೇ ದೇಶದ ಉಜ್ವಲ ಭವಿಷ್ಯ ಮತ್ತು ಪ್ರಗತಿ ಆ ದೇಶದ ಮಕ್ಕಳಿಂದ ಸಾಧ್ಯವಾಗಲಿದೆ. ಅವರ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಜವಾಬ್ದಾರಿ ಹೊಂದಿರುವ ನಾನು ಶಿಕ್ಷಣ ಸಚಿವನಾಗಿ ಶಕ್ತಿ ಮೀರಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಅವರು ನುಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮಾತನಾಡಿ, ಸರ್ಕಾರದ ಸೇವೆ ಕಚೇರಿಗಳಿಗೆ ಮಾತ್ರ ಸೀಮಿತವಾಗಿರದೆ ಸರ್ಕಾರದ ಯೋಜನೆಗಳು ಜನರಿಗೆ ತಲುಪಿ, ಜನರ ಬದುಕಿನಲ್ಲಿ ಬದಲಾವಣೆ ತರುವ ವ್ಯವಸ್ಥೆ ಆಗಬೇಕು ಎಂದರು.
ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸರ್ಕಾರ ಜನರ ಸಮಸ್ಯೆಗಳಿಗೆ ಕಿವಿಯಾಗಲಿದೆ ಎಂದ ಅವರು ರಾಜ್ಯದ ವಸತಿ ರಹಿತರಿಗೆ ನಿವೇಶನ ನೀಡಿ ನೆಮ್ಮದಿಯ ಸೂರು ನಿರ್ಮಿಸಿಕೊಳ್ಳಲು ಪ್ರತಿ ಜಿಲ್ಲೆಗೆ 50000 ನಿವೇಶನಗಳನ್ನು ಸೃಜಿಸುವಂತೆ ಸೂಚನೆ ನೀಡಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಸಾಗರ ತಾಲೂಕು ಒಂದಕ್ಕೆ ಸುಮಾರು ಹತ್ತು ಸಾವಿರ ನಿವೇಶನಗಳ ಬೇಡಿಕೆ ಬರುವ ಸಾಧ್ಯತೆ ಇದೆ ಎಂದವರು ನುಡಿದರು.
ಸಾಗರ ಪಟ್ಟಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಈಚೆಗೆ ಹಸುಗಳ ಕಳ್ಳತನ ನಿರಂತರವಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕಡೆ ಗಮನಹರಿಸಿ ಗೋ ಕಳ್ಳರನ್ನು ಹಿಡಿದು ಶಿಕ್ಷಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.
ಇದೇ ಕಾರ್ಯಕ್ರಮದಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ಅಹವಾಲು:
* ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆಗಿಂತ ತೀರಾ ಕಡಿಮೆ ಪ್ರಮಾಣದ ಮಳೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ನಿರೀಕ್ಷಿತ ಬೆಳೆ ಬಾರದೆ ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಸರ್ಕಾರವು ಸಾಗರ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ ಘೋಷಿಸಿ ಅಗತ್ಯ ಸೌಲಭ್ಯ ಮತ್ತು ಪರಿಹಾರವನ್ನು ಒದಗಿಸುವಂತೆ ಮನವಿ ಮಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವರು ನಾಳೆ ನಡೆಯುವ ಕ್ಯಾಬಿನೆಟ್ ನಲ್ಲಿ ವಿಷಯವನ್ನು ಪ್ರಸ್ತಾಪಿಸಿ ಸಾಗರ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ ಘೋಷಿಸುವಂತೆ ಸಚಿವರನ್ನು ಒತ್ತಾಯಿಸಿದರು.
* ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಪ್ರಮುಖವಾಗಿ ಖಾತೆ ಬದಲಾವಣೆ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿ, ವಸತಿ ಸೌಲಭ್ಯ ಕಲ್ಪಿಸಿ, ರಸ್ತೆ ದುರಸ್ತಿಗೊಳಿಸಿ ಬಸ್ ಸಂಚಾರ ಕಲ್ಪಿಸಿ ಮುಂತಾದ ಅಹವಾಲುಗಳು ಸಲ್ಲಿಕೆಯಾದವು.
* 2001ರಲ್ಲಿ ಸರ್ಕಾರದಿಂದ ನಿಯಮಾನುಸಾರ ಹಕ್ಕು ಹೊಂದಿರುವ ಜಮೀನುಗಳಿಗೆ ಹಕ್ಕುಪತ್ರ ನೀಡುವಲ್ಲಿ ತಹಸೀಲ್ದಾರರು ನಿರ್ಲಕ್ಷ ವಹಿಸುತ್ತಿದ್ದಾರೆ. – ಜೆ. ಎಲ್. ರಾಜಕುಮಾರ್,
* ತಾಲೂಕಿನ ಬರೂರು-ಕೊರ್ಲಿಕೊಪ್ಪದಿಂದ ಸಾಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದೆ. ಇದರಿಂದಾಗಿ ಸಾಗರ ಪಟ್ಟಣಕ್ಕೆ ಪ್ರತಿನಿತ್ಯ ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗಿದೆ. ಕೂಡಲೇ ರಸ್ತೆ ದುರಸ್ತಿಗೊಳಿಸಿ ಬಸ್ ಸಂಪರ್ಕ ಒದಗಿಸಬೇಕು. – ಕು. ಹರ್ಷಿಕಾ, ಕಾರ್ತಿಕ್, ಬರೂರು.
* ವೈದ್ಯಾಧಿಕಾರಿ ಡಾ. ನಾಗೇಂದ್ರಪ್ಪ ಅವರ ನಿರ್ಲಕ್ಷದಿಂದಾಗಿ ಆಪರೇಷನ್ ಗೆ ಬಂದ ಮಹಿಳೆಯ ಕಿಡ್ನಿಗೆ ತೊಂದರೆ ಆಗಿದೆ. ಅಂತಹ ವೈದ್ಯರನ್ನು ಅಮಾನತ್ತುಗೊಳಿಸಬೇಕು ಹಾಗೂ ರೋಗಿಯ ಕುಟುಂಬಕ್ಕೆ ಸೂಕ್ತ ಪರಿಕಾರ ಒದಗಿಸಬೇಕು. – ರೂಪ ಶೆಟ್ಟಿ, ಸಿರ್ಸಿ.
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಅರಣ್ಯಾಧಿಕಾರಿ ಪ್ರಸನ್ನ, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬಿ.ಆರ್. ಜಯಂತ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

