ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾಖಲೆಯ ಫಲಿತಾಂಶ ಬಂದಿದೆ. ಇದರ ನಡುವೆ ಪ್ರಥಮ ಭಾಷೆ ವಿಷಯಗಳಲ್ಲಿ ಅದರಲ್ಲೂ ಕನ್ನಡದಲ್ಲಿ 19,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದು ಬೆಳಕಿಗೆ ಬಂದಿದೆ.
ಕನ್ನಡವನ್ನು ಪ್ರಥಮ ಭಾಷೆಯಾಗಿ ಆಯ್ಕೆ ಮಾಡಿಕೊಂಡವರಲ್ಲಿ 18,678 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಕನ್ನಡವನ್ನು ತೃತೀಯ ಭಾಷೆಯಾಗಿ ತೆಗೆದುಕೊಂಡಿದ್ದ 289 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ದ್ವಿತೀಯ ಭಾಷೆಯಾಗಿ ಕನ್ನಡ ತೆಗೆದುಕೊಂಡವರಲ್ಲಿ ನೂರಾರು ಮಕ್ಕಳು ಅನುತ್ತೀರ್ಣರಾಗಿದ್ದಾರೆ. ಕನ್ನಡ ವಿಷಯದಲ್ಲಿ ಒಟ್ಟಾರೆ 19,000ಕ್ಕೂ ಅಧಿಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಕನ್ನಡ ಭಾಷಾ ವಿಷಯದಲ್ಲಿ ಪರೀಕ್ಷೆ ಬರೆದಿದ್ದ 6,07,275 ವಿದ್ಯಾರ್ಥಿಗಳಲ್ಲಿ 5,88,597 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ, ಉಳಿದ 18,678 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ ಎನ್ನಲಾಗಿದೆ.

