ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ನಟಿ ರಾಧಿಕಾ ಕುಮಾರಸ್ವಾಮಿ ಎರಡು ಕೋಟಿ ರೂಪಾಯಿ ಸಾಲ ನೀಡಿದ್ದರು ಎನ್ನುವ ಸಂಗತಿ ಲೋಕಾಯುಕ್ತ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.
ಅಕ್ರಮ ಆಸ್ತಿ ಸಂಪಾದನೆ ಸಂಬಂಧ ಲೋಕಾಯುಕ್ತ ಪೊಲೀಸರು ಜಮೀರ್ ಅಹ್ಮದ್ ಅವರ ಆದಾಯ ಮೂಲಗಳನ್ನು ಪರಿಶೀಲಿಸಿದಾಗ ಸಾಲ ಕೊಟ್ಟವರ ಪಟ್ಟಿ ಸಿಕ್ಕಿದೆ. ಇದರಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಉಲ್ಲೇಖವಾಗಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ರಾಧಿಕಾ ಕುಮಾರಸ್ವಾಮಿ ಅವರಿಂದ ಲೋಕಾಯುಕ್ತ ಪೊಲೀಸರು ವಿವರಣೆ ಪಡೆದುಕೊಂಡಿದ್ದಾರೆ. ತಾವು ಜಮೀರ್ ಅಹ್ಮದ್ ಗೆ ಸಾಲ ನೀಡಿರುವುದನ್ನು ಒಪ್ಪಿಕೊಂಡು ರಾಧಿಕಾ ಕುಮಾರಸ್ವಾಮಿಗೆ ಹೇಳಿಕೆ ದಾಖಲಿಸಿದ್ದಾರೆ.
2019 ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಾಗ ಆ ಕಂಪನಿಯೊಂದಿಗೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್ ಅಹ್ಮದ್ ಖಾನ್ ಅವರ ಮೇಲೆ ಇಡಿ ದಾಳಿ ನಡೆಸಿದ್ದು, ವರದಿ ಆಧರಿಸಿ ಸಚಿವರಾಗಿದ್ದ ಜಮೀರ್ ಅಹ್ಮದ್ ಖಾನ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಎಸಿಬಿ ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ನಂತರ ಪ್ರಕರಣದ ತನಿಖೆ ಲೋಕಾಯುಕ್ತ ಪೊಲೀಸರಿಗೆ ವರ್ಗಾವಣೆಯಾಗಿತ್ತು. ಲೋಕಾಯುಕ್ತ ಪೊಲೀಸರು ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ತಾವು ಸಾಲ ಪಡೆದಿರುವ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ಜಮೀರ್ ಅಹ್ಮದ್ ಖಾನ್ ಪಟ್ಟಿ ನೀಡಿದ್ದು, ಅದರಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಎರಡು ಕೋಟಿ ರೂಪಾಯಿ ಸಾಲ ನೀಡಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರಿಂದ ಲೋಕಾಯುಕ್ತ ಪೊಲೀಸರು ವಿವರಣೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.