ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭವಾಗಲಿವೆ. ಬಿಗಿ ಭದ್ರತೆಯಲ್ಲಿ ಪರೀಕ್ಷೆಗಳು ನಡೆಯಲಿದ್ದು, 7,10,363 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
‘ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಉತ್ತಮ ಅಂಕಗಳ ಜೊತೆಗೆ ಉಜ್ವಲ ಭವಿಷ್ಯವೂ ನಿಮ್ಮದಾಗಲಿ ಎಂದು ಹಾರೈಸುತ್ತೇನೆ’ ಎಂದು ಹೇಳಿದ್ದಾರೆ.
ಶಿಕ್ಷಣ ಸಚಿವರ ಶುಭ ಹಾರೈಕೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಹ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
‘ಪರೀಕ್ಷೆ ಎನ್ನುವುದು ಸವಾಲಲ್ಲ, ನಿಮ್ಮ ಸಾಮರ್ಥ್ಯದ ಪ್ರದರ್ಶನ!. ನನ್ನ ಪ್ರೀತಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ, ಕಳೆದ ಎರಡು ವರ್ಷಗಳಿಂದ ನೀವು ಪಟ್ಟ ಶ್ರಮ ಇಂದಿನಿಂದ ಫಲ ನೀಡುವ ಸಮಯ ಬಂದಿದೆ. ಪರೀಕ್ಷೆಯನ್ನು ಭಯದಿಂದ ನೋಡದೆ, ಆತ್ಮವಿಶ್ವಾಸದಿಂದ ಎದುರಿಸಿ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿ ಎಂದು ಹಾರೈಸುತ್ತೇನೆ’ ಎಂದು ಹೇಳಿದ್ದಾರೆ.
‘ಶಾಂತ ಮನಸ್ಸು ಮತ್ತು ಆತ್ಮವಿಶ್ವಾಸ ಇವೇ ನಿಮ್ಮ ಯಶಸ್ಸಿನ ಗುಟ್ಟು. ಸಕಾರಾತ್ಮಕ ಮನೋಭಾವದೊಂದಿಗೆ ಪರೀಕ್ಷೆ ಬರೆಯಿರಿ. ನಿಮ್ಮ ಕನಸುಗಳು ನನಸಾಗಲಿ, ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿ. ರಾಜ್ಯದ ಸಮಸ್ತ ವಿದ್ಯಾರ್ಥಿಗಳಿಗೆ ಯಶಸ್ಸಿನ ಹಾರೈಕೆಗಳು’ ಎಂದು ತಿಳಿಸಿದ್ದಾರೆ.
ನಿಷೇಧಾಜ್ಞೆ ಜಾರಿ: ಫೆಬ್ರವರಿ 28ರಿಂದ ಮಾರ್ಚ್ 17ರ ತನಕ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.
ಪರೀಕ್ಷೆ ನಡೆಯುವ ಅವಧಿಯಲ್ಲಿ ಈ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್‌ಗಳನ್ನು ಮುಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪರೀಕ್ಷೆಗಳ ವಿವರ
- ಒಟ್ಟು ವಿದ್ಯಾರ್ಥಿಗಳು 7,10,363
- ಹೊಸ ವಿದ್ಯಾರ್ಥಿಗಳು 6,46,801
- ಪುನರಾವರ್ತಿತ ವಿದ್ಯಾರ್ಥಿಗಳು 50,540
- ಖಾಸಗಿ ಅಭ್ಯರ್ಥಿಗಳು 13,022
- ಕಲಾ ವಿಭಾಗ 1,42,982
- ವಾಣಿಜ್ಯ ವಿಭಾಗ 2,11,174
- ವಿಜ್ಞಾನ ವಿಭಾಗ 2,92,645
- ಒಟ್ಟು ಪರೀಕ್ಷೆ ಕೇಂದ್ರಗಳು 1,217

