ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಎ ಐ ಸಿ ಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್ ಹಾಗೂ ಪವನ್ ಖೇರಾ ಅವರುಗಳು ಕಾಂಗ್ರೆಸ್ ಅಭ್ಯರ್ಥಿಯಾಗಿ ಶುಕ್ರವಾರ ಚುನಾವಣಾಧಿಕಾರಿ ಹಾಗೂ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂದಿ,ü ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಜಿತ್ ಸಿಂಗ್ ಸುರ್ಜೆವಾಲ ಸೇರಿದಂತೆ ಸಚಿವರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಮೂರು ಅಭ್ಯರ್ಥಿಗಳು ತಲಾ ಎರಡು ಸೆಟ್ ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಎಂ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಿಂದ ಎರಡನೇ ಬಾರಿಗೆ ರಾಜ್ಯಸಭೆ ಪ್ರವೇಶ ಮಾಡಿದರೆ, ಕೇಂದ್ರದ ಮಾಜಿ ಸಚಿವ ರಹಮಾನ್ ಖಾನ್ ಅವರ ಪತ್ರ ಮನ್ಸೂರ್ ಆಲಿಖಾನ್ ಮತ್ತು ಎಐಸಿಸಿ ರಾಷ್ಟ್ರೀಯ ವಕ್ತರ ಪವನ್ ಖೇರಾ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ.
ಒಗ್ಗಟ್ಟು ಪ್ರದರ್ಶನ
ಇನ್ನು ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕರು ಒಗ್ಗಟ್ಟು ಪ್ರದರ್ಶನ ನಡೆಸಿದ್ದು ವಿಶೇಷವಾಗಿತ್ತು ಮೊದಲು ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರನ್ನು ಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರು ಹೋಗಿ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ವೇಳೆ ವಿಮಾನ ನಿಲ್ದಾಣದ ವಿಐಪಿ ಲೋನ್ ನಲ್ಲಿ ಕೆಲ ಹೊತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು
ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ಕಾರುಗಳಲ್ಲಿ ಆಗಮಿಸಿದ ಎಲ್ಲಾ ನಾಯಕರು ನೇರವಾಗಿ ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ವಿಧಾನಸಭೆಯ ಕಾರ್ಯದರ್ಶಿಯವರ ಕೊಠಡಿಗೆ ತೆರಳಿ ತಮ್ಮ ಉಮೇದುವಾರಿಕೆ ಮಾಡಿದರು.
ನಿವೃತ್ತಿಯಾಗುವ ಸದಸ್ಯರು
ಹಾಲಿ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ. ದೇವೇಗೌಡ, ಈರಣ್ಣ ಕಡಾಡಿ ಮತ್ತು ನಾರಾಯಣ ಕೊರಗಪ್ಪ ಅವರು ಜೂನ್ 25, 2026 ರಂದು ನಿವೃತ್ತಿ ಹೊಂದಲಿದ್ದಾರೆ. ಈ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಜೂನ್ 18 ರಂದು ಮತದಾನ ನಡೆಯಲಿದೆ. ನಾಲ್ವರು ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ತೆರವಾಗಲಿರುವ ಈ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಪ್ರಮುಖ ನಿಯಮಗಳು:
ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಯ ನಾಮಪತ್ರಕ್ಕೆ ವಿಧಾನಸಭೆಯ ಕನಿಷ್ಠ 10 ಮಂದಿ ಚುನಾಯಿತ ಸದಸ್ಯರು ಸೂಚಕರಾಗಿ ಸಹಿ ಮಾಡಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 10,000 ರೂ. ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5,000 ರೂ.ಗಳ ಠೇವಣಿ ನಿಗದಿಪಡಿಸಲಾಗಿದೆ. ಮತದಾನ ಪ್ರಕ್ರಿಯೆಯು ಬೆಂಗಳೂರಿನ ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106 ರಲ್ಲಿ ನಡೆಯಲಿದೆ. ಚುನಾವಣಾಧಿಕಾರಿಯಾಗಿ ಎಂ.ಕೆ. ವಿಶಾಲಾಕ್ಷಿ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ಬಿ.ಎಸ್. ಮಹಲಿಂಗೇಶ್ ಕಾರ್ಯನಿರ್ವಹಿಸಲಿದ್ದಾರೆ.
ಚುನಾವಣಾ ವೇಳಾಪಟ್ಟಿ
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: 08 ಜೂನ್ 2026 (ಸೋಮವಾರ)
ನಾಮಪತ್ರಗಳ ಪರಿಶೀಲನೆ: 09 ಜೂನ್ 2026 (ಮಂಗಳವಾರ)
ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ: 11 ಜೂನ್ 2026 (ಗುರುವಾರ)
ಮತದಾನದ ದಿನಾಂಕ: 18 ಜೂನ್ 2026 (ಗುರುವಾರ)
ಮತದಾನದ ಸಮಯ: ಬೆಳಗ್ಗೆ 9:00 ರಿಂದ ಸಂಜೆ 4:00 ರವರೆಗೆ.
ಮತ ಎಣಿಕೆ: 18 ಜೂನ್ 2026 ರಂದು ಸಂಜೆ 5:00 ಗಂಟೆಗೆ.

