ಬೆಂಗಳೂರು ನಗರದಲ್ಲಿ ಯುವಕರ ವೀಲಿಂಗ್ ಅಬ್ಬರಕ್ಕೆ ಪೊಲೀಸರು ಕಡಿವಾಣ ಹಾಕಿದ್ದಾರೆ. ಗುರುವಾರ ರಾತ್ರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, 58 ವೀಲಿಂಗ್ ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಸಂಬಂಧ 45 ಮಂದಿಯನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳು ಅಪ್ರಾಪ್ತ ವಯಸ್ಕರಾಗಿದ್ದು, ಕೆಲವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವೀಲಿಂಗ್ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ನಗರದ ಬಹುತೇಕ ಮೇಲ್ಸೇತುವೆಗಳನ್ನು ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು, ಕೆ.ಆರ್. ಪುರಂ ಬಳಿ 17 ವೀಲಿಂಗ್ ವೀರರನ್ನು ಬಂಧಿಸಿದ್ದಾರೆ. ಅವರೆಲ್ಲರೂ ಆವಲಹಳ್ಳಿಯಲ್ಲಿ ಸೇರಿದ್ದ 200 ಜನರ ಗುಂಪಿನ ಭಾಗವಾಗಿದ್ದರು ಎಂದು ತಿಳಿದುಬಂದಿದೆ.
ಹಳೆಯ ಮದ್ರಾಸ್ ರಸ್ತೆ, ತುಮಕೂರು ರಸ್ತೆ ಹಾಗೂ ವಿಮಾನ ನಿಲ್ದಾಣ ರಸ್ತೆಯ ಮೇಲ್ಸೇತುವೆಯ ಕೆಳಗಿನ ಸರ್ವೀಸ್ ರಸ್ತೆಗಳಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು. ಹಲವು ಆರೋಪಿಗಳು ಸರ್ವೀಸ್ ರಸ್ತೆಗಳಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.
ನ್ಯಾಯಾಲಯವು 25,000 ರೂಪಾಯಿವರೆಗೆ ದಂಡ ವಿಧಿಸಬಹುದು. ವೀಲಿಂಗ್‌ಗೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗುತ್ತದೆ. ವಾಹನದ ನೋಂದಣಿ ಪ್ರಮಾಣಪತ್ರ (ಆರ್‌ಸಿ) ರದ್ದು ಅಥವಾ ಅಮಾನತುಗೊಳಿಸಲು ಕಳುಹಿಸಲಾಗುತ್ತದೆ. ಅಪ್ರಾಪ್ತ ವಯಸ್ಕರು ವೀಲಿಂಗ್‌ನಲ್ಲಿ ಭಾಗಿಯಾಗಿದ್ದರೆ, ಅವರ ಪೋಷಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಯ ಸೆಕ್ಷನ್ 281 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ.