ನವದೆಹಲಿ : ಈ ವಾರ ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗೋವಾದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಮುಂಬರುವ ದಿನಗಳಲ್ಲಿ ಈ ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ ಎಂದು ಐಎಂಡಿ ತಿಳಿಸಿದೆ.
ರಾಜ್ಯದ ಕೆಲವು ಭಾಗಗಳಲ್ಲಿ ಐಎಂಡಿ ರೆಡ್ ಅಲರ್ಟ್ ಘೋಷಿಸಿದ ನಂತರ ಕರಾವಳಿ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗೋವಾ ಶಿಕ್ಷಣ ಇಲಾಖೆ ಜುಲೈ 15 ರ ಸೋಮವಾರ 12 ನೇ ತರಗತಿಯವರೆಗಿನ ಶಾಲೆಗಳಿಗೆ ರಜೆ ಘೋಷಿಸಿದೆ. ಐಎಂಡಿ ಸೋಮವಾರ ಕೇರಳದ ಮಲಪ್ಪುರಂ, ಕಣ್ಣೂರು ಮತ್ತು ಕಾಸರಗೋಡಿಗೆ ರೆಡ್ ಅಲರ್ಟ್ ಮತ್ತು ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕೋಝಿಕೋಡ್ ಮತ್ತು ವಯನಾಡ್ಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಿಂದಾಗಿ ಕೇರಳದ ಆರು ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ.
ಮುಂದಿನ ಕೆಲವು ದಿನಗಳಲ್ಲಿ ಕೇರಳ, ಕರ್ನಾಟಕ ಮತ್ತು ಗೋವಾದ ಕೆಲವು ಭಾಗಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚು ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಾದ ಸತಾರಾ, ಕೊಲ್ಹಾಪುರ, ಸಿಂಧುದುರ್ಗ್ ಮತ್ತು ರತ್ನಗಿರಿಯಲ್ಲಿ ಭಾರಿ ಮಳೆಯ ಮಧ್ಯೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಸೋಮವಾರ ಕೂಡ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಎನ್ ಆರ್ ಪುರ. ಶೃಂಗೇರಿ, ಮೂಡಿಗೆರೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ಮುಂಜಾಗ್ರತೆ ಕ್ರಮವಾಗಿ ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.