ಢಾಕಾ: ಸರ್ಕಾರಿ ಉದ್ಯೋಗದಲ್ಲಿ ಮೀಸಲು ವಿರೋಧಿಸಿ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಶನಿವಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಸರ್ಕಾರ ಕಂಡಲ್ಲಿ ಗುಂಡಿಕ್ಕಲು ಆದೇಶ ಹೊರಡಿಸಿದೆ.
ಬಾಂಗ್ಲಾದೇಶ ರಾಜಧಾನಿ ಢಾಕಾ ಸೇರಿದಂತೆ ಅನೇಕ ನಗರಗಳಲ್ಲಿ ವಿಶ್ವವಿದ್ಯಾಲಯಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮೃತಪಟ್ಟವರ ಸಂಖ್ಯೆ 115ಕ್ಕೂ ಅಧಿಕವಾಗಿದೆ.
ವಿದ್ಯಾರ್ಥಿಗಳ ಪ್ರತಿಭಟನೆ, ಹಿಂಸಾಚಾರ ತಡೆಯಲು ಢಾಕಾದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಸೇನೆ ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಇದಕ್ಕೆ ಜಗ್ಗದೇ ಹೋರಾಟ ಮುಂದುವರೆಸಿದ್ದಾರೆ. ಹಲವು ಕಡೆ ಭದ್ರತಾ ಪಡೆ ಮತ್ತು ವಿದ್ಯಾರ್ಥಿಗಳ ನಡುವೆ ಚಕಮಕಿ ನಡೆದಿದೆ. ಲಾಠಿಚಾರ್ಜ್, ಗುಂಡಿನ ದಾಳಿಯಲ್ಲಿ 115ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ಕಂಡಲ್ಲಿ ಗುಂಡಿಕ್ಕಲು ಆದೇಶ ನೀಡಲಾಗಿದೆ.
ಬಾಂಗ್ಲಾದ ವಿವಿಧ ವಿವಿಗಳಲ್ಲಿ ಶಿಕ್ಷಣ ಪಡೆಯುತ್ತಿದ್ದ 778 ಭಾರತೀಯ ವಿದ್ಯಾರ್ಥಿಗಳು ಗಡಿ ಮಾರ್ಗಗಳ ಮೂಲಕ ಮರಳಿದ್ದಾರೆ. 200 ವಿದ್ಯಾರ್ಥಿಗಳು ಢಾಕಾ ಮತ್ತು ಚಿತ್ತಗಾಂಗ್ ವಿಮಾನ ನಿಲ್ದಾಣಗಳ ಮೂಲಕ ಸ್ವದೇಶಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.