ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಬಿಆರ್ಎಸ್ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಬುಧವಾರ ವಿಸ್ತರಿಸಿದೆ.
ಈ ಹಿಂದೆ ನೀಡಲಾದ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಆರೋಪಿಗಳನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲಾಯಿತು.
ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಸಿಬಿಐ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನವನ್ನು ಆಗಸ್ಟ್ 9 ರವರೆಗೆ ಮತ್ತು ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಗಸ್ಟ್ 13 ರವರೆಗೆ ವಿಸ್ತರಿಸಿದ್ದಾರೆ.
ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಸೋಮವಾರ ಕಾಯ್ದಿರಿಸಿದೆ. ಇದಕ್ಕೂ ಮುನ್ನ ಎಎಪಿ ಮುಖ್ಯಸ್ಥ ಮತ್ತು ಇತರ ಆರೋಪಿಗಳ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿತ್ತು.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಈಗಾಗಲೇ ತನ್ನ ಪ್ರಾಸಿಕ್ಯೂಷನ್ ದೂರನ್ನು ದಾಖಲಿಸಿದ್ದು, ಎಎಪಿ ಮತ್ತು ಅದರ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಆರೋಪಿಗಳೆಂದು ಹೆಸರಿಸಿದೆ.