ಬೆಂಗಳೂರು: ಮೂಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜಾಗಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿತ್ತಿದ್ದಂತೆ ಎಐಸಿಸಿ ನಾಯಕರಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಸೇರಿದಂತೆ ಪ್ರಮುಖಕರು ಕರೆ ಮಾಡಿ ಸಿದ್ದರಾಮಯ್ಯ ಅವರಿಗೆ ಅಭಯ ನೀಡಿದ್ದಾರೆ. ಕಾನೂನು ಹೋರಾಟ ಮಾಡೋಣ ಎಂದು ಧೈರ್ಯ ತುಂಬಿದ್ದಾರೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಇನ್ನೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದಾರೆ. ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಹೋರಾಟಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.