ಬೆಂಗಳೂರು: ಮಳೆಗಾಲ ಆರಂಭವಾದರೂ ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ರಸ್ತೆಗುಂಡಿಗಳನ್ನು ಶೀಘ್ರವಾಗಿ ಮುಚ್ಚುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಟ್ವೀಟ್ ಮೂಲಕ ಆಗ್ರಹಿಸಿದ್ದರು. ಸಚಿವರ ಟ್ವೀಟ್ ಗೆ ಸ್ಪಂದಿಸಿರುವ ಬಿಬಿಎಂಪಿ ರಸ್ತೆ ಗುಂಡಿ ಮುಚ್ಚುವ ಕೆಲಸ ಆರಂಭಿಸಿದೆ.
ರಸ್ತೆ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ತಾತ್ಕಾಲಿಕ ಬಂದ್ ಮಾಡಲಾಗಿದೆ.
ವೀರಣ್ಣಪಾಳ್ಯದಿಂದ ಹೆಬ್ಬಾಳ ವೃತ್ತದ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯಲ್ಲಿನ ಗುಂಡಿ ಮುಚ್ಚುವ ಕಾಮಗಾರಿ ಆರಂಭವಾಗಿದೆ. ಇಂದಿನಿಂದ ಬುಧವಾರ ಆ.21ರವರೆಗೆ ಬಿಬಿಎಂಪಿ ಈ ಭಾಗದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಿದೆ. ಹೀಗಾಗಿ ರಾತ್ರಿ 10.00 ಗಂಟೆಯಿಂದ ಮುಂಜಾನೆ 06.00 ಗಂಟೆಯ ವರೆಗೆ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಬದಲಿ ಮಾರ್ಗ ಸೂಚಿಸಲಾಗಿದೆ.
ವೀರಣ್ಣಪಾಳ್ಯ ಕಡೆಯಿಂದ ಹೆಬ್ಬಾಳದ ಕಡೆಗೆ ಸಂಚರಿಸುವ ವಾಹನ ಸವಾರರು ಹೊರ ವರ್ತುಲ ರಸ್ತೆಯ ಮುಖ್ಯ ಪಥವನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸ್ ಸೂಚಿಸಿದೆ.