ಬಾಗಲಕೋಟೆ: ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗಾಗಿ ಕೇಂದ್ರ ತಂಡ ಹಾಗೂ ಮಾಜಿ ಸಿಡ್ಬ್ಲೂ ಸಿ ಸದಸ್ಯರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದ್ದು, ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಆಲಮಟ್ಟಿಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಮಿತಿಯ ವರದಿಯ ಆದಾರದ ಮೇಲೆ ಅಣೆಕಟ್ಟುಗಳ ಸುರಕ್ಷತೆಗೆ ಸರ್ಕಾರ ಕೆಲಸ ಮಾಡಲಿದೆ. ನಾರಾಯಣಪುರ ಅಣೆಕಟ್ಟಿನ ಗೇಟುಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಅಳವಡಿಸಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಗಂಗಾ ಆರತಿ ಮಾದರಿಯಲ್ಲಿ ಕೃಷ್ಣಾ ಆರತಿ ಕಾರ್ಯಕ್ರಮ ನಡೆಸಬೇಕು ಎಂದು ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಮತ್ತು ಆರ್.ಬಿ.ತಿಮ್ಮಾಪುರ ಅವರು ಸೇರಿದಂತೆ ಶಾಸಕರು ಮನವಿ ಮಾಡಿದ್ದಾರೆ. ತುಂಗಾ ಆರತಿ ಈಗಾಗಲೇ ನಡೆಯುತ್ತಿದೆ. ಕಾವೇರಿ ಆರತಿ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಅದೇ ರೀತಿ ಕೃಷ್ಣಾ ಆರತಿಯನ್ನು ಪರಿಗಣಿಸಲಾಗುವುದು ಎಂದು ಹೇಳಿದರು.
ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ಭೂಮಿ ಕಳೆದು ಕೊಂಡವರು ಹಾಗೂ ಭೂಸ್ವಾಧೀನ ವಿಚಾರವಾಗಿ ಈ ಭಾಗದ ಮೂರು ಮಂತ್ರಿಗಳು ಹಾಗೂ ಶಾಸಕರು ಪ್ರಸ್ತಾವನೆ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು. ಭೂಮಿ ಕಳೆದುಕೊಂಡಿರುವ ಸಂತ್ರಸ್ತರ ವಿಚಾರವಾಗಿ ಪ್ರತ್ಯೇಕ ಸಭೆ ಕರೆದು, ಕಾನೂನು ಚೌಕಟ್ಟಿನಲ್ಲಿ ಯಾವ ರೀತಿಯ ಪರಿಹಾರ ನೀಡಬಹುದು ಎಂಬುದರ ಕುರಿತು ತೀರ್ಮಾನ ಮಾಡಲಾಗುವುದು. ಪುನರ್ವಸತಿ ವಿಚಾರವಾಗಿ ಅವಗಾಹನೆ ನಡೆಸಬೇಕಿದೆ. ಈಗಾಗಲೇ ಕಳೆದ ವರ್ಷದ ಏಪ್ರಿಲ್, ನವೆಂಬರ್ ಅಲ್ಲಿ ತಪಾಸಣೆ ನಡೆಲಾಗಿದೆ ಎಂದು ಹೇಳಿದರು.