ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಚಂದ್ರಶೇಖರ್ ಅವರು ಒತ್ತಡದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಶಿವಮೊಗ್ಗ ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಅಧಿಕಾರಿಗಳಾದ ಪದ್ಮನಾಭ್, ಪರುಶರಾಮ್ ಅವರ ಒತ್ತಡದಿಂದ ಮನನೊಂದು ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ. ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು.
ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿನ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ನಂತರ ಸರ್ಕಾರ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅಮಾನತು ಮಾಡಿತ್ತು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿರುವ ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶಿಸಿತ್ತು.