ಬೆಂಗಳೂರು: ಪರೀಕ್ಷೆ ಮುಂದೂಡಿಕೆ ಒತ್ತಾಯದ ನಡುವೆಯೂ ಆಗಸ್ಟ್ 27 ರಂದು ಮಂಗಳವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ಉಪ ಕೇಂದ್ರಗಳು ಸೇರಿ 564 ಪರೀಕ್ಷಾ ಕೇಂದ್ರಗಳಲ್ಲಿ ಕೆಎಎಸ್ ಪರೀಕ್ಷೆ ನಡೆಯಲಿದೆ.
384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ಇಂದು ಬೆಳಗ್ಗೆ 10ರಿಂದ ಆರಂಭವಾಗಲಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆವರೆಗೆ ಪತ್ರಿಕೆ -1, ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.
ಒಟ್ಟು 2,10,910 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿದ್ದು, ಸಿಸಿ ಕ್ಯಾಮರಾ ಕಣ್ಗಾವಲು, ಕಟ್ಟುನಿಟ್ಟಿನ ಪೊಲೀಸ್ ಭದ್ರತೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳ ಬಳಿ 2 ಗಂಟೆ ಮೊದಲೇ ಹಾಜರಾಗಿರಬೇಕು. ಎರಡು ಪಾಸ್ಪೋರ್ಟ್ ಸೈಜ್ ಫೋಟೋ ತರಬೇಕು. ಪ್ರತಿಯೊಬ್ಬ ಅಭ್ಯರ್ಥಿಯನ್ನು ಲೋಹ ಪತ್ತೆ ಯಂತ್ರದಿಂದ ತಪಾಸಣೆ ನಡೆಸಿ ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗುವುದು. ಶೂ, ಸಾಕ್ಸ್ ಆಭರಣ ಧರಿಸುವಂತಿಲ್ಲ. ಸರಳ ಉಡುಪಿನಲ್ಲಿ ಪರೀಕ್ಷೆಗೆ ಹಾಜರಾಗಬೇಕು ಎಂಬುದು ಸೇರಿದಂತೆ ಅಭ್ಯರ್ಥಿಗಳಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ.