ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೊರೋನಾ ಅಕ್ರಮಗಳ ಕುರಿತು ತನಿಖೆಗೆ ನೇಮಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ಆಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದೆ.
ಕೋವಿಡ್ ಉಪಕರಣಗಳ ಖರೀದಿಯಲ್ಲಿ ಸಾಕಷ್ಟು ಅಕ್ರಮ ನಡೆದಿದ್ದು, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ತನಿಖಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ.
7223.58 ಕೋಟಿ ರೂಪಾಯಿ ಮೊತ್ತದ ಖರೀದಿ ಪ್ರಕ್ರಿಯೆಯಲ್ಲಿ ನಡೆದ ಅಕ್ರಮಗಳ ಬಗ್ಗೆ ವರದಿ ನೀಡಲಾಗಿದೆ. ಆರೋಗ್ಯ ಇಲಾಖೆ, ಎನ್.ಹೆಚ್.ಎಂ., ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ಕರ್ನಾಟಕ ಡ್ರಗ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿ ಸೇರಿ ವಿವಿಧೆಡೆಯ ಖರೀದಿ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಆಕ್ರಮ ನಡೆದ ಬಗ್ಗೆ ವರದಿ ನೀಡಲಾಗಿದೆ.
2023ರ ಆಗಸ್ಟ್ ನಲ್ಲಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ಆಯೋಗವನ್ನು ಸರ್ಕಾರ ರಚಿಸಿತ್ತು. ಕೊರೋನಾ ನಿರ್ವಹಣೆ, ಔಷಧ, ಉಪಕರಣ, ಸಾಮಗ್ರಿ ಖರೀದಿ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಕುರಿತು ಮೂರು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿತ್ತು. ಆಯೋಗದ ಅವಧಿಯನ್ನು ಆರು ತಿಂಗಳು ವಿಸ್ತರಿಸಲಾಗಿದೆ. ಶನಿವಾರ ಆಯೋಗ ಮಧ್ಯಂತರ ವರದಿ ಸಲ್ಲಿಸಿದೆ.