ಬೆಂಗಳೂರು: ಕೇಂದ್ರ ಸರ್ಕಾರ ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಆಚರಣೆ ಹೆಸರಲ್ಲಿ ಅನ್ಯಭಾಷಿಕರ ಮೇಲೆ ಹಿಂದೆ ಹೇರಿಕೆ ಹುನ್ನಾರ ನಡೆಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ಹಮ್ಮಿಕೊಂಡಿದೆ.
ಸೆಪ್ಟೆಂಬರ್ 14 ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾಷಾ ವೈವಿಧ್ಯತೆ ಹಾಳು ಮಾಡುವ ಕೇಂದ್ರ ವಿರುದ್ಧ ಪ್ರತಿಭಟನೆ ಕೈಗೊಂಡಿರುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ತಿಳಿಸಿದ್ದಾರೆ.
ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುತ್ತದೆ. ಈ ಮೂಲಕ ದೇಶವನ್ನು ಒಡೆಯುವ ಹುನ್ನಾರ ನಡೆಸಲಾಗುತ್ತಿದೆ. ಭಾರತದ ಭೌಗೋಳಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಭಾಷಿಕ ವೈವಿಧ್ಯತೆಯನ್ನು ಹಾಳು ಮಾಡಲು ಹಿಂದಿ ಸಾಮ್ರಾಜ್ಯಶಾಹಿಗಳು ನಿರಂತರವಾಗಿ ಪ್ರಯತ್ನಿಸುತ್ತಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವ ಎಲ್ಲ 22 ಭಾಷೆಗಳನ್ನು ಅಧಿಕೃತ ಆಡಳಿತ ಭಾಷೆಗಳಮನ್ನಾಗಿ ಮಾಡಿ ಬಹುತ್ವ, ಸಾರ್ವಭೌಮತೆ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.