ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರನನ್ನು ನಾನೆಂದೂ ಒಪ್ಪುವುದಿಲ್ಲ. ಮುಂದಿನ ಅಧ್ಯಕ್ಷರು ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿಯಲ್ಲಿ ವಿಜಯೇಂದ್ರ ಇನ್ನೂ ಜೂನಿಯರ್. ಅವನಿಗೆ ಏನೂ ಐಡಿಯಾಲಜಿ ಇಲ್ಲ. ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದ್ದು, ಅವನು ಅಧ್ಯಕ್ಷನಾಗಿದ್ದಕ್ಕೆ ನನ್ನ ವಿರೋಧವಿದೆ. ಹಾಗೆಂದ ಮಾತ್ರಕ್ಕೆ ನಾನು ಯಡಿಯೂರಪ್ಪನವರಿಗೆ ವಿರೋಧಿಯಲ್ಲ, ಯಡಿಯೂರಪ್ಪ ನಮ್ಮ ಪಕ್ಷದ ಪ್ರಶ್ನಾತೀತ ನಾಯಕರಾಗಿದ್ದಾರೆ. ಅವರ ಬಗ್ಗೆ ತುಂಬಾ ಗೌರವ ಇದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರು ಮತ್ತು ಆರ್.ಎಸ್.ಎಸ್. ಪ್ರಮುಖರೊಂದಿಗೆ ನಡೆದ ಸಭೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ರಮೇಶ್ ಜಾರಕಿಹೊಳಿ ಸಭೆಯಲ್ಲಿ ಏನೆಲ್ಲ ಚರ್ಚೆಯಾಗಿದೆ ಎಂಬುದನ್ನು ಹೇಳಲು ಆಗುವುದಿಲ್ಲ. ತಪ್ಪು ಮಾಡಿದವರಿಗೆ ಸಭೆಯಲ್ಲಿ ಮುಖಂಡರು ಬೈದಿದ್ದಾರೆ. 15ರಿಂದ 20 ಜನರ ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಮುನ್ನಡೆಸಲಿ ಎಂದು ಬಿಜೆಪಿ, ಆರ್.ಎಸ್.ಎಸ್. ಪ್ರಮುಖರ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದೇವೆ ವರಿಷ್ಠರು ನೀವು ಇಂತಿಂಥ ಕೆಲಸ ಮಾಡಬೇಕು ಎಂದು ಟಾಸ್ಕ್ ನೀಡಿದ್ದಾರೆ ಎಂದರು.
120 ರಿಂದ 130 ಕ್ಷೇತ್ರಗಳನ್ನು ಗೆಲ್ಲಿಸಿ ಕೊಡುವ ಶಕ್ತಿ ನಮ್ಮಲ್ಲಿದ್ದು, ವರಿಷ್ಠರು ನೀಡಿದ ಟಾಸ್ಕ್ ನಲ್ಲಿ ನಾನು ವಿಫಲನಾದಲ್ಲಿ ನನ್ನನ್ನು ಒದ್ದು ಹೊರಹಾಕಿ ಎಂದು ಸಂಘ ಪರಿವಾರದ ಪ್ರಮುಖರ ಸಭೆಯಲ್ಲಿ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
ಅನಂತ್ ಕುಮಾರ್ ನಿಧನರಾದ ನಂತರ ಬಿಜೆಪಿಯಲ್ಲಿ ಯಾರೂ ಪ್ರಬಲ ನಾಯಕನಾಗಿಲ್ಲ. ಒಬ್ಬರ ಕೈಯಲ್ಲಿ ಬಿಜೆಪಿ ಆಡಳಿತ ಕೊಡುವುದು ಬೇಡ, ಸಾಮೂಹಿಕ ನಾಯಕತ್ವಕ್ಕೆ ಒತ್ತು ನೀಡಿ ಎಂದು ಸಭೆಯಲ್ಲಿ ಹೇಳಿದ್ದೇವೆ. ಒಬ್ಬರ ಕೈಗೆ ಪಕ್ಷ ಕೊಟ್ಟರೆ, ನಾನು ಕೂಡ ಆ ಚೇರ್ ಮೇಲೆ ಕೂತರೆ ಸರ್ವಾಧಿಕಾರ ಧೋರಣೆ ಬರುತ್ತದೆ. ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.