ಶಿವಮೊಗ್ಗ: ಹೆದ್ದಾರಿ ಪ್ರಾಧಿಕಾರದಿಂದಾಗಿ ಭೂಮಿ ಕಳೆದುಕೊಂಡವರಿಗೆ ಪರಿಹಾರದ ಹಣ ನೀಡದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಜಪ್ತಿಗೆ ಕೋರ್ಟ್ ಆದೇಶ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ರಾಜ್ಯ ರಸ್ತೆ ಅಭಿವೃದ್ಧಿ ಹಾಗೂ ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಭೂಮಿ ಕಳೆದುಕೊಂಡಿದ್ದು, ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಭೂಮಿ ಕಳೆದುಕೊಂಡ ವ್ಯಕ್ತಿ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ಕೋರ್ಟ್, ಪರಿಹಾರದ ಹಣ ನೀಡಲು ವಿಳಂಬ ಮಾಡುತ್ತಿರುವುದಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.
ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಅಗಡಿ ಅಶೋಕ್ ಎಂಬುವವರಿಗೆ ಸೇರಿದ ನಿವೇಶನದ ಸ್ವಲ್ಪ ಭಾಗವನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ 2011ರಲ್ಲಿ ವಶಪಡಿಸಿಕೊಂಡಿತ್ತು. ಈ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ಬದ್ಧವಾಗಿ ಪರಿಹಾರ ನೀಡಿಲ್ಲ ಎಂದು ನಿವೇಶನ ಮಾಲೀಕ ಕೋರ್ಟ್ ಮೊರೆ ಹೋಗಿದ್ದರು. ಈ ವೇಳೆ ಕೋರ್ಟ್ ಮೂರು ತಿಂಗಳ ಒಳಗಾಗಿ ಅಶೋಕ್ ಅವರಿಗೆ 3.93ಕೋಟಿ ಸೇರಿದಂತೆ ಒಟ್ಟು 4.44 ಕೋಟಿ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಕಚೇರಿಗೆ ಸೂಚಿಸಿತ್ತು. ಆದರೆ ಪರಿಹಾರದ ಮೊತ್ತ ಪಾವತಿಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಅರ್ಜಿದಾರರು ಮತ್ತೆ ಕೋರ್ಟ್ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಜಿಲ್ಲಾಧಿಕಾರಿ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡುವಂತೆ ಆದೇಶ ನೀಡಿದೆ.