ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣತೊಟ್ಟಿದೆ. ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆ ಘೋಷಿಸಲಾಗಿದೆ.
ಸರ್ಕಾರದಿಂದ ಪ್ರವಾಸೋದ್ಯಮ, ಆರೋಗ್ಯ ಯೋಜನೆಗೆ ಹೆಚ್ಚಿನ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. 31 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಒಪ್ಪಿಗೆ ಸೂಚಿಸಲಾಗಿದೆ. 9 ತಾಲೂಕು ಆಸ್ಪತ್ರೆಗಳನ್ನು ಉಪವಿಭಾಗೀಯ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಎರಡು ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಒಟ್ಟು 890 ಕೋಟಿ ರೂಪಾಯಿ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ಬಗ್ಗೆ ಚರ್ಚೆ ನಡೆದಿದೆ. ಕೊಪ್ಪಳದಲ್ಲಿ 56 ಕೋಟಿ ರೂಪಾಯಿ ಮೊತ್ತದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಕಾಮಗಾರಿಗೆ ಒಪ್ಪಿಗೆ ನೀಡಲಾಗಿದೆ.
ಸಂಪುಟ ಸಭೆಯಲ್ಲಿ 56 ವಿಷಯಗಳು ಬಗ್ಗೆ ಚರ್ಚೆ ನಡೆದಿದೆ/ ಇವುಗಳಲ್ಲಿ 46 ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಾಗಿವೆ. ಈ ಭಾಗದ ಸಚಿವರು, ಶಾಸಕರು ಸಂಪುಟ ಸಭೆಗೆ ಒತ್ತಾಯಿಸಿದ್ದರು. ಯುಪಿಎ ಸರ್ಕಾರ ಇದ್ದಾಗ 371ಜೆ ವಿಶೇಷ ಸ್ಥಾನಮಾನ ಸಿಕ್ಕಿದೆ. ಮನಮೋಹನ್ ಸಿಂಗ್ ಅವಧಿಯಲ್ಲಿ ಸಂವಿಧಾನದಲ್ಲಿ ಸೇರ್ಪಡೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಒಟ್ಟು ಮೊತ್ತ 11770 ಕೋಟಿ ರೂ. ಆಗಿದೆ. ಬೀದರ್, ಕಲಬುರಗಿ ಜಿಲ್ಲೆಯಲ್ಲಿ. 7200 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಜಾರಿಗೊಳಿಸಲಾಗುವುದು. ನಾರಾಯಣಪುರ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಕೇಂದ್ರ ಸರ್ಕಾರಕ್ಕೂ ಯೋಜನೆ ಬಗ್ಗೆ ಮಾಹಿತಿ ನೀಡಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮಪಾಲು ಅನುದಾನ ನೀಡಬೇಕಿದ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗುವುದು. ಅಧಿಕಾರಕ್ಕೆ ಬಂದ ನಂತರ ನಾವು ನುಡಿದಂತೆ ನಡೆದಿದ್ದೇವೆ. ಪ್ರತಿ ವರ್ಷ 5000 ಕೋಟಿ ರೂ. ಅನುದಾನ ಕೊಡಬೇಕೆಂದು ತೀರ್ಮಾನಿಸಿದ್ದೇವೆ ಎಂದರು.