HomeKarnatakaBIG NEWS: ‘ಒಂದು ದೇಶ ಒಂದು ಚುನಾವಣೆ’ ಒಕ್ಕೂಟ ವ್ಯವಸ್ಥೆಗೆ ವಿರುದ್ಧ, ಅನುಷ್ಠಾನ ಅಸಾಧ್ಯ: ಸಿಎಂ...

BIG NEWS: ‘ಒಂದು ದೇಶ ಒಂದು ಚುನಾವಣೆ’ ಒಕ್ಕೂಟ ವ್ಯವಸ್ಥೆಗೆ ವಿರುದ್ಧ, ಅನುಷ್ಠಾನ ಅಸಾಧ್ಯ: ಸಿಎಂ ಸಿದ್ಧರಾಮಯ್ಯ

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ‘‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು’’. ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ. ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆಪಡುತ್ತಿದ್ದಾರೆ. ದೇಶಾದ್ಯಂತ ಕಾನೂನು ಸುವ್ಯವಸ್ಥೆ ಮೇಲಿನ ನಿಯಂತ್ರಣ ತಪ್ಪಿಹೋಗಿದ್ದು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಮಿತಿಮೀರಿ ಹೋಗುತ್ತಿದೆ. ಈ ಬಗ್ಗೆ ಯೋಚನೆ ಮಾಡಲು ಕೂಡಾ ಪುರುಸೊತ್ತಿಲ್ಲದ ಪ್ರಧಾನ ಮಂತ್ರಿಗಳು ‘‘ಒಂದು ದೇಶ ಒಂದು ಚುನಾವಣೆ’’ ಎಂಬ ಗಿಮಿಕ್ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

ಆಡಳಿತಾರೂಢ Bharatiya Janata Party(BJP) ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ “ಒಂದು ದೇಶ ಒಂದು ಚುನಾವಣೆ” ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘‘ಒಂದು ದೇಶ ಒಂದು ಚುನಾವಣೆ’’ ಯ ವ್ಯವಸ್ಥೆಗೆ ವಿರುದ್ಧವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೆ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾವದಲ್ಲಿ ಪರಿಹಾರ ಇಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರವಾಗಿದೆ. ಇದರ ಬದಲಿಗೆ ಸದನದಲ್ಲಿ ವಿಶ್ವಾಸಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ ಎಂದಿದ್ದಾರೆ.

ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ  ಅವಸರದಿಂದ ಮಾಡುವ ಕೆಲಸ ಅಲ್ಲ ಎಂದು ತಿಳಿಸಿದ್ದಾರೆ

ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ಪರಿಚ್ಛೇದಗಳಿಗೆ ತಿದ್ದುಪಡಿ ತರಬೇಕಾಗಿದೆ. ಈಗಿನ ವ್ಯವಸ್ಥೆಯಲ್ಲಿ ಸಂವಿಧಾನ ತಿದ್ದುಪಡಿಗೆ ಬೇಕಾದಷ್ಟು ಸದಸ್ಯರ ಸಂಖ್ಯೆಯನ್ನು ಹೊಂದಿಸಿಕೊಳ್ಳುವುದು ಎನ್‌ಡಿಎ ಗೆ ಕೂಡಾ ಕಷ್ಟ ಸಾಧ್ಯ. ಇವೆಲ್ಲವೂ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಗೊತ್ತಿದ್ದರೂ ಕೇವಲ ಜನರಲ್ಲಿ ಗೊಂದಲವನ್ನು ಹುಟ್ಟುಹಾಕಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಈ ಪ್ರಸ್ತಾವವನ್ನು ಸಚಿವ ಸಂಪುಟ ಅಂಗೀಕರಿಸಿದೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular