ಮೈಸೂರು: ಕೋರ್ಟ್ ಆದೇಶದಂತೆ ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರರ ವಿರುದ್ಧ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಎಫ್ಐಆರ್ ದಾಖಲಿಸಿದ್ದು, ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಿದ್ದಾರೆ.
ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಉದೇಶ್ ಅವರು, ಇಬ್ಬರು ಡಿವೈಎಸ್ಪಿ ಮತ್ತು ಇಬ್ಬರು ಇನ್ಸ್ಪೆಕ್ಟರ್ ನೇತೃತ್ವದಲ್ಲಿ ನಾಲ್ಕು ತಂಡ ರಚಿಸಿ ತನಿಖೆಯ ಜವಾಬ್ದಾರಿಯನ್ನು ತಾವು ವಹಿಸಿಕೊಂಡಿದ್ದಾರೆ.
ಮೈಸೂರು ಡಿವೈಎಸ್ಪಿ ಎಸ್. ಮಾಲತೇಶ್, ಚಾಮರಾಜನಗರ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ಹಾಗೂ ಇಬ್ಬರು ಇನ್ಸ್ಪೆಕ್ಟರ್ ಒಳಗೊಂಡ ತನಿಖಾ ತಂಡ ರಚನೆ ಮಾಡಲಾಗಿದೆ. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆಗೆ ತುರ್ತು ಸಭೆ ನಡೆಸಿ ಪ್ರಕರಣ ಸಂಬಂಧ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಕೋರ್ಟ್ ನಿಂದ ನೀಡಲಾದ ದಾಖಲೆಗಳು, ದೂರಿನಲ್ಲಿ ಅಡಕವಾದ ಮಾಹಿತಿಗಳ ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ ಸೋಮವಾರದಿಂದ ತನಿಖೆ ಆರಂಭಿಸುವ ಸಾಧ್ಯತೆ ಇದೆ. ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಸಿದ್ದರಾಮಯ್ಯ ಪಾತ್ರ, ಅವರ ಕುಟುಂಬದ ಪಾತ್ರದ ಬಗ್ಗೆಯೂ ಕೂಲಂಕಷವಾಗಿ ತನಿಖೆ ನಡೆಸಲಾಗುವುದು.