HomeKarnatakaನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವಕ್ಕಿಂತ ದೊಡ್ಡದಲ್ಲ: 14 ಸೈಟ್...

ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವಕ್ಕಿಂತ ದೊಡ್ಡದಲ್ಲ: 14 ಸೈಟ್ ಹಿಂದಿರುಗಿಸಿದ ಸಿಎಂ ಪತ್ನಿ ಪಾರ್ವತಿ ಹೇಳಿಕೆ

ಮೈಸೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಅವರ ಪತ್ನಿ ಬಿ.ಎಂ. ಪಾರ್ವತಿ 14 ಸೈಟ್ ಗಳನ್ನು ಹಿಂತಿರುಗಿಸಲು ಮುಂದಾಗಿದ್ದಾರೆ.

ಮೈಸೂರಿನ ವಿಜಯನಗರದ ಮೂರು ಮತ್ತು ನಾಲ್ಕನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂತಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಪಾರ್ವತಿ ಅವರು ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜಕೀಯವಾಗಿ ಆಗುತ್ತಿರುವ ಸಂಕಷ್ಟ ನೋಡಲಾಗದ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ.

ಅಲ್ಲದೇ ಈ ಕುರಿತಾಗಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪತಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ ಎಂದು ಅವರು ತಿಳಿಸಿದ್ದಾರೆ.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಸಿಎಂ ಪತ್ನಿ ಪಾರ್ವತಿ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular