ಬೆಂಗಳೂರು: 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅ. 3ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ.
ವಿಜಯಪುರ, ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ನಗರಗಳ 163 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕ್ಯಾಮೆರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುವುದು. 66,990 ಮಂದಿ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ.
ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಮೊದಲು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಇರಬೇಕು. ಆದಷ್ಟು ಬೇಗನೆ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬಂದವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಕ್ಯಾಮೆರಾ ಅಳವಡಿಸಲಾಗಿದ್ದು, ವೆಬ್ ಕಾಸ್ಟಿಂಗ್ ಮೂಲಕ ಎಲ್ಲಾ ಬೆಳವಣಿಗೆ ಗಮನಿಸಲಾಗುವುದು. ಪ್ರತಿ ಕೇಂದ್ರದಲ್ಲಿಯೂ ಜಾಮರ್ ಅಳವಡಿಕೆಗೆ ಕ್ರಮ ವಹಿಸಲಾಗಿದೆ. ಬ್ಲೂಟೂತ್ ಸೇರಿ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು ಕಾರ್ಯನಿರ್ವಹಿಸದಂತೆ ನಿಗಾ ವಹಿಸಲಾಗಿದೆ.