ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯಲ್ಲಿ ಶನಿವಾರ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ.
ಸ್ಥಳೀಯರ ಪ್ರಕಾರ, ಸಂತ್ರಸ್ತೆಯನ್ನು ಆಕೆಯ ನೆರೆಹೊರೆಯವನಾದ ವ್ಯಕ್ತಿ ಪಟಾಶ್ಪುರದ ಆಕೆಯ ಮನೆಯಿಂದ ಕರೆದೊಯ್ದಿದ್ದ ಎನ್ನಲಾಗಿದೆ.
ಆ ವ್ಯಕ್ತಿ ತನ್ನ ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ, ನಂತರ ಆಕೆಗೆ ಬಲವಂತವಾಗಿ ವಿಷ ಕುಡಿಸಿ ಹೊರಗೆ ಬಿಟ್ಟಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಗ್ರಾಮಸ್ಥರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಗ್ರಾಮದಾದ್ಯಂತ ಆಕೆಯ ಸಾವಿನ ಸುದ್ದಿ ಹರಡಿದ ನಂತರ, ಹಲವಾರು ಗ್ರಾಮಸ್ಥರು ಆರೋಪಿಯ ಮನೆಗೆ ತೆರಳಿ ಬಿದಿರಿನ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.