ಮುಂಬೈ: ಟಾಟಾ ಸನ್ಸ್‌ನ ಗೌರವಾನ್ವಿತ ಅಧ್ಯಕ್ಷ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಗುರುವಾರ ಸಂಜೆ ಮಹಾರಾಷ್ಟ್ರದ ವರ್ಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ಸಿ ಸಂಪ್ರದಾಯದಂತೆ ನೆರವೇರಿಸಲಾಯಿತು.
ಅವರು ಬುಧವಾರ ಮುಂಬೈನ ಬ್ರೀಚ್-ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಟಾಟಾ ಗ್ರೂಪ್‌ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರಿಗೆ 86 ವರ್ಷ ವಯಸ್ಸಾಗಿತ್ತು. ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ವರ್ಲಿಯಲ್ಲಿರುವ ಸ್ಮಶಾನಕ್ಕೆ ತಂದ ನಂತರ ಮುಂಬೈ ಪೋಲೀಸರಿಂದ ಗೌರವ ನೀಡಲಾಯಿತು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವಿಸ್, ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮತ್ತು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಟಾಟಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.