ಹೈದರಾಬಾದ್: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವ್ಯಂಗ್ಯವಾಡಿದ್ದು, ಎಲ್ಲರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ, ಮೋದಿಯನ್ನು ಸೋಲಿಸಲು ನಿಮ್ಮೊಬ್ಬರಿಗೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಅವರು ಹರಿಯಾಣ ಚುನಾವಣಾ ಸೋಲಿನ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರನ್ನು ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಯಶಸ್ವಿಯಾಗಲು ಪ್ರತಿ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಬಿಜೆಪಿ, ಮೋದಿ ಸೋಲಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಶುಕ್ರವಾರ ರಾತ್ರಿ ತೆಲಂಗಾಣದ ವಿಕಾರಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಸೂದೆಯನ್ನು ಕಾನೂನಾಗಿ ಜಾರಿಗೆ ತಂದರೆ ದೇಶದಲ್ಲಿ ಸಾಮಾಜಿಕ ಅಸ್ಥಿರತೆ ಉಂಟಾಗಲಿದೆ ಎಂದು ಹೇಳಿದರು.
ಹರಿಯಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ಬಿಜೆಪಿ ವಿರೋಧಿ ಮತಗಳ ವಿಭಜನೆಗೆ ‘ಜಾತ್ಯತೀತ’ ಪಕ್ಷಗಳು ತನ್ನನ್ನು ದೂಷಿಸುತ್ತಿದ್ದವು. ಎಐಎಂಐಎಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ. ಆದರೂ ಹರಿಯಾಣದಲ್ಲಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಪಕ್ಷವು ಹೇಗೆ ಸೋತಿತು ಎಂದು ಪ್ರಶ್ನಿಸಿದ್ದಾರೆ.
ನಾನು ಕಾಂಗ್ರೆಸ್ ಪಕ್ಷಕ್ಕೆ ಹೇಳಲು ಬಯಸುತ್ತೇನೆ. ನಾನು ಏನು ಹೇಳುತ್ತಿದ್ದೇನೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಮೋದಿಯನ್ನು(ಬಿಜೆಪಿ) ಸೋಲಿಸಲು ನೀವು ಎಲ್ಲರನ್ನು ಕರೆದುಕೊಂಡು ಹೋಗಬೇಕು. ನೀವು ಒಬ್ಬರೇ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.