ಬೆಂಗಳೂರು: ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೊಂದು ವಾರದಲ್ಲಿ ಸ್ಥಳ ನಿಗದಿಪಡಿಸಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಅಧಿಕಾರಿಗಳೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಿದ ನಂತರ ಸ್ಥಳವನ್ನು ಅಂತಿಮಗೊಳಿಸಲಾಗುವುದು. ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಸರ್ಕಾರ 5 ಸ್ಥಳಗಳನ್ನು ಗುರುತಿಸಿದೆ. ಇವುಗಳಲ್ಲಿ ಯಾವುದನ್ನೂ ಅಂತಿಮಗೊಳಿಸಿಲ್ಲ. ಇನ್ನೊಂದು ವಾರದಲ್ಲಿ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸ್ಥಳ ನಿಗದಿಪಡಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ದಾಬಸ್ ಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿ ಒಟ್ಟು ಐದು ಸ್ಥಳಗಳನ್ನು ಮುಕ್ತವಾಗಿರಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡುವಲ್ಲಿ ಯಾರಿಗೂ ರಾಜಕೀಯ ಹಿತಾಸಕ್ತಿ ಇಲ್ಲ. ಬೆಂಗಳೂರಿನ ಜನತೆಗೆ ಮತ್ತು ಉದ್ಯಮಿಗಳ ಅನುಕೂಲವಷ್ಟೇ ಮುಖ್ಯವಾಗಿದೆ. ಇದರಿಂದ ಆರ್ಥಿಕ ಬೆಳವಣಿಗೆಗೆ ಒಳ್ಳೆಯ ಕೊಡುಗೆ ಬರಬೇಕು. ಇದರಲ್ಲಿ ಯಾವುದೇ ರಾಜೀ ಇಲ್ಲವೆಂದು ಸಚಿವರು ಹೇಳಿದ್ದಾರೆ.