ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಪ್ರಕರಣದ ಸಿಬಿಐ ತನಿಖೆಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ ಅನುಮತಿಯನ್ನು ಹಿಂಪಡೆದ ಹಾಲಿ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ವತಿಯಿಂದ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಈ ಸಂಬಂಧ ಸುಪ್ರೀಂಕೋರ್ಟ್ ಕದ ತಟ್ಟುವಂತೆ ಸಿಬಿಐಗೆ ಹೈಕೋರ್ಟ್ ನಿಂದ ಸೂಚನೆ ನೀಡಲಾಗಿತ್ತು.
ಮತ್ತೊಂದು ಕಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಸಿಬಿಐ ತನಿಖೆಗೆ ತಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ಅರ್ಜಿ ವಿಚಾರಣೆ ಹಂತದಲ್ಲಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠ ಶಿವಕುಮಾರ್ ಮತ್ತು ಲೋಕಾಯುಕ್ತಕ್ಕೆ ನೋಟಿಸ್ ನೀಡಿದೆ.
ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆಗೆ ನೀಡಿದ ಅನುಮತಿ ಹಿಂಪಡೆದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಗೆ ವಿಶೇಷ ಮೇಲ್ಮನವಿ ಸಲ್ಲಿಸಿದೆ. ಇತ್ತೀಚೆಗೆ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಯತ್ನಾಳ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಪೀಠ ಡಿ.ಕೆ. ಶಿವಕುಮಾರ್ ಮತ್ತು ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿತ್ತು.