ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ಈ ನಡುವೆ ಇನ್ನೂ 6 ದಿನಗಳ ಕಾಲ ಕರ್ನಾಟಕದಲ್ಲಿ ಜೋರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಳೆ ಅವಾಂತರಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ಜನತೆ ಹೈರಾಣಾಗಿದ್ದಾರೆ. ಮಳೆಯಿಂದಾಗಿ ನಗರದಲ್ಲಿ ಸೃಷ್ಟಿಯಾಗಿರುವ ಅಧ್ವಾನಗಳು ಒಂದೆರಡಲ್ಲ. ಬೆಳಿಗ್ಗೆಯಿಂದ ಕೊಂಚ ಬಿಸಿಲಿನ ವಾತಾವರಣವಿದೆಯಾದರೂ ಸಂಜೆ ವೇಳೆ ಮತ್ತೆ ವರುಣಾರ್ಭಟ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 6 ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಬೆಳಗಾವಿ, ಧಾರವಾಡ, ಹಾವೇರಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಲಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ವರುಣಾರ್ಭಟ ಜೋರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.