ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಇಂದೂ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೂ ಕಾರ್ಮೋಡ ಕವಿದಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಕೂಡ ಶಾಲೆಗಳು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಅವಾಂತರ ಹಿನ್ನೆಲೆಯಲ್ಲಿ ಹಲವು ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಗೆ ಸೂಚಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಡಾನಾ ಚಂಡಮಾರುತ ಪರಿಣಾಮದಿಂದಾಗಿ ಬೆಂಗಳೂರಿನಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ.
ರಾಜ್ಯದ ಬಿಜಾಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಮಳೆಪೀಡಿತ ಪ್ರದೇಶಗಳಾಗಿ ಮಾರ್ಪಟ್ಟಿವೆ.