ಶಿವಮೊಗ್ಗ: ರೈತರ ಭೂಮಿ ಹಕ್ಕು ಸಮಸ್ಯೆಯನ್ನು ಹಂತ ಹಂತವಾಗಿ ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಿವಾಸಕ್ಕೆ ಭೇಟಿ ನೀಡಿದ ಅವರು ಮಾತನಾಡಿ, ಮಲೆನಾಡು ರೈತರ ಭೂಮಿ ಹಕ್ಕು ಹೋರಾಟ ಜಿಲ್ಲೆಯ ಜ್ವಲಂತ ಸಮಸ್ಯೆಯಾಗಿದ್ದು, ಹಂತ ಹಂತವಾಗಿ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಶರಾವತಿ ಜಲ ವಿದ್ಯುತ್ ಯೋಜನೆಯಲ್ಲಿ 12,000 ಎಕರೆ ಭೂಮಿ ಕಳೆದುಕೊಂಡಿರುವ ಮಾತಿದೆ. ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಮಲೆನಾಡು ರೈತರ ಭೂ ಹಕ್ಕಿನ ಹೋರಾಟದ ಬಗ್ಗೆ ಉಲ್ಲೇಖಿಸಲಾಗಿದೆ. ಇಲ್ಲಿನ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರವನ್ನು ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರ ಗಮನಕ್ಕೆ ತಂದು ಸಮಸ್ಯೆ ಪರಿಹಾರಕ್ಕೆ ಬದ್ಧವಾಗಿರುತ್ತೇವೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರ ತೆರಿಗೆ ಹಣದಿಂದ 160 ಕೋಟಿ ರೂಪಾಯಿ ವೆಚ್ಚದಲ್ಲಿ ಜಾತಿಗಣತಿ ನಡೆಸಲಾಗಿದೆ. ಅದನ್ನು ಸಾರ್ವಜನಿಕಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ತೀರ್ಮಾನದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.
ಕಾಗೋಡು ತಿಮ್ಮಪ್ಪನವರ ನಿವಾಸಕ್ಕೆ ಆಗಮಿಸಿದ ಸಚಿವ ಪರಮೇಶ್ವರ್ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ, ಅನಿತಾ ಕುಮಾರಿ ಸೇರಿದಂತೆ ಹಲವರು ಇದ್ದರು.