ಬೆಳಗಾವಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಬೆಳಗಾವಿಯ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ.
ಗೋಕಾಕ್ ತಾಲೂಕ್ ಕೊಳವೆ ಗ್ರಾಮದ ಕೆಂಪಣ್ಣ(29) ಶಿಕ್ಷೆಗೆ ಗುರಿಯಾದ ಅಪರಾಧಿ. 2018 ರ ನವೆಂಬರ್ 14ರಂದು ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಆಕೆಯ ಪೋಷಕರು ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖಾಧಿಕಾರಿ ಶ್ರೀಧರ ಸಾತಾರೆ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅಪರಾಧಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸಂತ್ರಸ್ತೆಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಒಂದು ಲಕ್ಷ ರೂ. ನೀಡುವಂತೆ ಆದೇಶಿಸಿದ್ದಾರೆ.