ಬೆಂಗಳೂರು: ಗ್ರಾಮೀಣ ಪ್ರದೇಶಗಳ ಇ- ಸ್ವತ್ತು ಮಂಜೂರಾತಿ ಪ್ರಕ್ರಿಯೆ ಸರಳೀಕರಣ ಮತ್ತು ಸಬಲೀಕರಣಗೊಳಿಸಲು ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಕಾರ್ಯಪಡೆ ರಚನೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇ- ಖಾತೆ ಸಂಬಂಧ ಬುಧವಾರ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳೊಂದಿಗೆ ಅವರು ಚರ್ಚೆ ನಡೆಸಿದ್ದಾರೆ.
ಗ್ರಾಮ ಠಾಣಾ ವ್ಯಾಪ್ತಿಯಲ್ಲಿಲ್ಲದ ಆಸ್ತಿಗಳಿಂದ ತೆರಿಗೆ ಸಂಗ್ರಹಿಸದೇ ಗ್ರಾಮ ಪಂಚಾಯಿತಿಗಳ ಸಂಪನ್ಮೂಲ ಕ್ರೂಢೀಕರಣಕ್ಕೆ ಹಿನ್ನಡೆ ಉಂಟಾಗಿದೆ. ಹೀಗಾಗಿ ಗ್ರಾಮ ಠಾಣಾ ವ್ಯಾಪ್ತಿಯ ಗ್ರಾಮದ ಹೊರ ಭಾಗದಲ್ಲಿನ ಉದ್ದಿಮೆಗಳು, ವಸತಿ ಸಮುಚ್ಛಯಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗುವುದು. ಗ್ರಾಮ ಪಂಚಾಯಿತಿಗಳನ್ನು ಆರ್ಥಿಕವಾಗಿ ಸದೃಢಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಿದ್ದು, ನಾಗರೀಕರಿಗೆ ಇ-ಸ್ವತ್ತು ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಲು ಕಾರ್ಯಪಡೆ ರಚಿಸಲಾಗುವುದು.
ಗ್ರಾಮಗಳಿಗೆ ಹೊಂದಿಕೊಂಡಂತೆ ಕಂದಾಯ ಭೂಮಿಯಲ್ಲಿ ಬಡಾವಣೆಗಳು ನಿರ್ಮಾಣವಾಗಿದ್ದು, ಇಂತಹ ಬಡಾವಣೆಗಳಲ್ಲಿನ ನಿವಾಸಿಗಳಿಗೆ ಇ- ಸ್ವತ್ತು ದಾಖಲೆಗಳನ್ನು ಸುಗಮವಾಗಿ ಪಡೆದುಕೊಳ್ಳುವಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು ಎಂದು ಹೇಳಲಾಗಿದೆ.