ಮೈಸೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಹಿಂಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ಕೋರ್ಟ್ ನಿಂದಲೇ ನಿಷೇಧವಿದ್ದರೂ ರಾಜ್ಯ ಸರ್ಕಾರ ರಾತ್ರಿ ಸಂಚಾರಕ್ಕೆ ಅನುಮತಿ ನೀಡಲಿದೆಯೇ ಎಂಬ ಪ್ರಶ್ನೆ ಮೂಡಿದೆ.
ಕಳೆದ ವಯನಾಡು ಲೋಕಸಭಾ ಚುನಾವಣೆ ವೇಳೆ ಬಂಡಿಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಈಗ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಈ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇಂತದ್ದೊಂದು ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಂಡೀಪುರದಲ್ಲಿ ರಾತ್ರಿ ಸಂಚಾರ ಪುನ: ಪ್ರಾರಂಭಿಸುವ ಬಗ್ಗೆ ಚರ್ಚೆಯಾಗಿಲ್ಲ. ಸರ್ಕಾರದ ಮುಂದೆ ಈ ಕುರಿತ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಅವರನ್ನೇ ಕೇಳಿ. ನನಗೆ ತಿಳಿದ ಮಟ್ಟಿಗೆ ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದರು.