ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ ಪ್ರಸ್ತುತ ಮೊದಲ ಹಂತದಲ್ಲಿ 10,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ನೆಹರು ಅವರ 135 ನೇ ಜಯಂತಿ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಶಾಲಾ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.
ಜೋಗುಪಾಳ್ಯದ ಬಾಲಕರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ರಿಚರ್ಡ್ ಕೇಳಿದ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರ ನೀಡಿದ ನಂತರ ಸಚಿವ ಮಧು ಬಂಗಾರಪ್ಪ ವಿವರಣೆ ನೀಡಿದ್ದಾರೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. 13000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಂಡಿದ್ದು, ಇನ್ನೂ 10 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಕರಿದ್ದು ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಶಾಲೆಗಳಿಗೆ ಎಲ್ಲಾ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.