ಬೆಂಗಳೂರು: ರೇಷನ್ ನಲ್ಲಿ ಹಣ ನೀಡುವ ಬದಲು ಬೇಳೆ, ಅಡುಗೆ ಎಣ್ಣೆ, ಸಕ್ಕರೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಚೀಟಿದಾರರಿಗೆ ರೇಷನ್ ನಲ್ಲಿ ಹಣ ನೀಡುವ ಬದಲು ಅಡುಗೆ ಎಣ್ಣೆ, ಸಕ್ಕರೆ, ಬೇಳೆ ನೀಡುವ ಚಿಂತನೆ ನಡೆಸಿದ್ದು, ಪಡಿತರ ಚೀಟಿದಾರರಿಗೆ ಬಾಕಿ ಇರುವ ಹಣವನ್ನು ವಾರದಲ್ಲಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ರಾಜ್ಯದ ರೈತರಿಂದ ಗರಿಷ್ಠ 20 ಅಥವಾ 25 ಕ್ವಿಂಟಾಲ್ ರಾಗಿ ಖರೀದಿಗೆ ಮಿತಿ ನಿಗದಿಪಡಿಸಲಾಗುವುದು. 8 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಪಡಿತರ ವ್ಯವಸ್ಥೆಯಡಿ ರಾಜ್ಯಕ್ಕೆ 4.5 ಲಕ್ಷ ಮೆಟ್ರಿಕ್ ಟನ್ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.