ಹುಬ್ಬಳ್ಳಿ: ರಾಜ್ಯದ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರ ರೀತಿ ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಸಂದರ್ಭದಲ್ಲಿ ಪುರುಷರಿಗೂ ಉಚಿತ ಪ್ರಯಾಣದ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಿರ್ದಿಷ್ಟ ವಯೋಮಿತಿಯ ಗಂಡುಮಕ್ಕಳಿಗೆ ಉಚಿತ ಪ್ರಯಾಣ ಕಲ್ಪಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದು, ಇದರಿಂದಾಗಿ ಪುರುಷರಿಗೂ ಉಚಿತ ಪ್ರಯಾಣದ ಸೌಲಭ್ಯ ಸಿಗುವ ನಿರೀಕ್ಷೆ ಗರಿಗೆದರಿತ್ತು.
ಇದೀಗ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪುರುಷರಿಗೆ ಉಚಿತ ಪ್ರಯಾಣ ಕಲ್ಪಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಡಿಸಿಎಂ ಹೇಳಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು. ಶಕ್ತಿ ಯೋಜನೆ ರಾಜ್ಯದಲ್ಲಿ ಉತ್ತಮವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.