ಬೆಂಗಳೂರು : ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು, ಮದ್ಯ ಮಾರಾಟ ಸಂಘ ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿದೆ.ಆದ್ದರಿಂದ ರಾಜ್ಯದಲ್ಲಿ ಇಂದು ಮದ್ಯ ಮಾರಾಟ ಬಂದ್ ಇರುವುದಿಲ್ಲ.
ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ, ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾರ್ ಮಾಲೀಕರ ಸಂಘ ಇಂದು ನ.20ರಂದು ರಾಜ್ಯಾದ್ಯಂತ ಬಾರ್ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಾರ್ ಮಾಲೀಕರ ಸಂಘದ ಪದಾಧಿಕಾರಿಗಳ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಾರ್ ಬಂದ್ ನಿರ್ಧಾರ ಹಿಂತೆಗೆದುಕೊಳ್ಳಲಾಗಿದೆ.
ಬಾರ್ ಅಸೋಸಿಯೇಷನ್ ವಿಭಾಗೀಯ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಮಾತುಕತೆ ಬಳಿಕ ಮದ್ಯಮಾರಾಟ ಬಂದ್ ಇಲ್ಲ ಎಂದು ಅಧಿಕೃತವಾಗಿ ಮಾಹಿತಿ ಹೊರಬಿದ್ದಿದೆ.