ಬೆಂಗಳೂರು: ಕರ್ನಾಟಕ ವಕ್ಫ್ ಮಂಡಳಿಗೆ ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಣೆಗೆ ಅವಕಾಶ ಕಲ್ಪಿಸಿ ಸರ್ಕಾರ ಹೊರಡಿಸಿದ ಆದೇಶಕ್ಕೆ ಹೈಕೋರ್ಟ್ ಗುರುವಾರ ತಡೆ ನೀಡಿದೆ.
ಬೆಂಗಳೂರಿನ ಆಲಂಪಾಷ ಅವರು ಸಲ್ಲಿಸಿದ ಪಿಎಎಲ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ವಾದ ವಿವಾದಗಳನ್ನು ಆಲಿಸಿದೆ. ನಂತರ ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಣೆ ಅಧಿಕಾರವನ್ನು ಕರ್ನಾಟಕ ರಾಜ್ಯ ವಕ್ಪ್ ಮಂಡಳಿಗೆ ನೀಡಿ ರಾಜ್ಯ ಸರ್ಕಾರ 2023ರ ಸೆಪ್ಟೆಂಬರ್ 30ರಂದು ಹೊರಡಿಸಿದ್ದ ಆದೇಶಕ್ಕೆ ಜನವರಿ 7 ರವರೆಗೆ ತಡೆ ನೀಡಲಾಗುವುದು ಎಂದು ಮಧ್ಯಂತರ ಆದೇಶ ಹೊರಡಿಸಿದೆ.
ಯಾವುದೇ ಅಧಿಕಾರ ಇಲ್ಲದೆ ವಕ್ಫ್ ಮಂಡಳಿ ಆ ರೀತಿ ಮದುವೆ ಪ್ರಮಾಣ ಪತ್ರ ವಿತರಿಸುವುದನ್ನು ಒಪ್ಪಲಾಗದು ಎಂದು ನ್ಯಾಯಾಲಯ ಹೇಳಿದ್ದು, ಮುಂದಿನ ವಿಚಾರಣೆಯನ್ನು 2025ರ ಜನವರಿ 7ರಂದು ನಿಗದಿಪಡಿಸಲಾಗಿದೆ. ವಕ್ಫ್ ಮಂಡಳಿಗೆ ಇಂತಹ ಅಧಿಕಾರವನ್ನು ಯಾವ ಕಾನೂನಿನಡಿ ನೀಡಲಾಗಿದೆ ಎನ್ನುವ ಬಗ್ಗೆ ಸರ್ಕಾರ ಉತ್ತರ ನೀಡಬೇಕೆಂದು ಕಳೆದ ವಿಚಾರಣೆ ವೇಳೆ ಹೈಕೋರ್ಟ್ ಆದೇಶಿಸಿತ್ತು.