ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಅರ್ಹತಾ ಪರೀಕ್ಷೆ(ಕೆ-ಸೆಟ್) ನವೆಂಬರ್ 24ರ ಭಾನುವಾರ ನಡೆಯಲಿದೆ.
1.05 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಒಟ್ಟು 41 ವಿಷಯಗಳಿಗೆ ಬೆಂಗಳೂರು ಸೇರಿದಂತೆ ರಾಜ್ಯದ 12 ಜಿಲ್ಲೆಗಳ 252 ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.
ಭದ್ರತೆಗಾಗಿ ಪೊಲೀಸರು, ಗೃಹ ರಕ್ಷಕ ಸಿಬ್ಬಂದಿ ನಿಯೋಜಿಸಲಾಗಿದೆ. ಸಿಸಿ ಕ್ಯಾಮೆರಾ ಮೂಲಕ ನಿಗಾ ವಹಿಸಲಾಗಿದೆ. ಅಭ್ಯರ್ಥಿಗಳನ್ನು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಲಾಗುವುದು. ಹಾಲ್ ಟಿಕೆಟ್ ನಲ್ಲಿ ನೀಡಿರುವ ನಿರ್ದೇಶನಗಳನ್ನು ಅಭ್ಯರ್ಥಿಗಳು ತಪ್ಪದೇ ಪಾಲಿಸಬೇಕು ಎಂದು ತಿಳಿಸಲಾಗಿದೆ.
ಇನ್ನು ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 24 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಬೆಂಗಳೂರಿನ ಮೂರು ಕಡೆ ಪರೀಕ್ಷೆ ನಡೆಯಲಿದ್ದು, 2 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.